ದೆಹಲಿ: ಬೆಲೆ ಏರಿಕೆ ಬಿಸಿಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಅನುಕೂಲ ಕಲ್ಪಿಸಲು ಮುಂದಿನವಾರದಿಂದಲೇ ʻಭಾರತ್ʼ ಬ್ರ್ಯಾಂಡ್ ಅಕ್ಕಿ ಮಾರಾಟ ಆರಂಭಿಸುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.
ಈ ಬಗ್ಗೆ ಕೇಂದ್ರ ಆಹಾರ ಇಲಾಖೆಯ ಕಾರ್ಯದರ್ಶಿ ಸಂಜೀವ್ ಚೋಪ್ರಾ ಮಾತನಾಡಿದ್ದು, ಕಳೆದ ಒಂದು ವರ್ಷದಲ್ಲಿ ಚಿಲ್ಲರೆ ಮತ್ತು ಸಗಟು ಮಾರುಕಟ್ಟೆಯಲ್ಲಿ ಅಕ್ಕಿ ಬೆಲೆ ಶೇ.15ರಷ್ಟು ಹೆಚ್ಚಳವಾಗಿದೆ. ವಿವಿಧ ಮಾದರಿಯ ಅಕ್ಕಿ ರಫ್ತಿನ ಮೇಲೆ ನಿಯಂತ್ರಣ ಹೇರಿದ್ದರೂ ದರ ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ ಮುಂದಿನ ವಾರದಿಂದ ಜಾರಿಗೆ ಬರುವಂತೆ ಕೇಂದ್ರ ಸರ್ಕಾರವೇ ಮುಕ್ತ ಮಾರುಕಟ್ಟೆಯಲ್ಲಿ ಕೆ.ಜಿ.ಗೆ 29 ರೂ. ನಂತೆ ಅಕ್ಕಿ ಮಾರಾಟ ಮಾಡಲು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.
ಈಗಾಗಲೇ ʻಭಾರತ್ ಬ್ರ್ಯಾಂಡ್ʼ ಗೋದಿ ಹಿಟ್ಟು ಮತ್ತು ಕಡಲೆ ಬೇಳೆ ಮಾರಾಟವಾಗುತ್ತಿದೆ. ಗೋದಿ ಹಿಟ್ಟು ಪ್ರತಿ ಕೆ.ಜಿಗೆ 27.50 ರೂ. ಕಡಲೆ ಬೇಳೆ ಪ್ರತಿ ಕೆ.ಜಿಗೆ 60 ರೂ.ಗಳಿಗೆ ಮಾರಾಟವಾಗುತ್ತಿದೆ. ಇದರೊಂದಿಗೆ ಅಕ್ಕಿಯೂ ಮಾರಾಟವಾಗಲಿದೆ. ಪ್ರತಿ ಕೆಜಿ ಅಕ್ಕಿಗೆ 29 ರೂ. ನಿಗದಿಪಡಿಸಲಾಗಿದೆ. 5 ಕೆಜಿ ಮತ್ತು 10 ಕೆಜಿ ಪ್ಯಾಕೆಟ್ಗಳಲ್ಲಿ ದೊರೆಯಲಿದೆ ಎಂದು ಮಾಹಿತಿ ನೀಡಿದ್ದಾರೆ