ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯ ಹಗರಣಗಳ ತನಿಖೆ ವಿಚಾರದ ಬಗ್ಗೆ ಕ್ಯಾಬಿನೆಟ್ ಸಭೆಯಲ್ಲಿ ಪ್ರಸ್ತಾಪ ಮಾಡಲಾಗಿದೆ. ಪಿಎಸ್ಐ ನೇಮಕಾತಿ ಹಗರಣ ಸೇರಿದಂತೆ ವಿವಿಧ ಹಗರಣಗಳ ತನಿಖೆ ಬಗ್ಗೆ ಎಸ್ಐಟಿ ರಚನೆ ಮಾಡುವ ಬಗ್ಗೆ ಚರ್ಚೆ ನಡೆದಿದೆ.
ಹಿಂದೆ ನಾವು ಬಿಜೆಪಿ ಅವಧಿಯಲ್ಲಿನ ಹಗರಣಗಳ ಬಗ್ಗೆ ಧ್ವನಿ ಎತ್ತಿದ್ದೇವೆ. ಈಗ ತನಿಖೆ ಮಾಡದಿದ್ದರೆ ಹೊಂದಾಣಿಕೆ ರಾಜಕಾರಣ ಎನ್ನುತ್ತಾರೆ. ಹೀಗಾಗಿ ಕೂಡಲೇ ವಿಶೇಷ ತನಿಖಾ ತಂಡ ರಚಿಸಿ ತನಿಖೆಗೆ ಸೂಚಿಸಿ ಎಂದು ಸಭೆಯಲ್ಲಿ ಸಚಿವರಾದ ಪ್ರಿಯಾಂಕ್ ಖರ್ಗೆ, ಕೃಷ್ಣಭೈರೇಗೌಡ ಮನವಿ ಮಾಡಿದ್ದಾರೆ. ಇದಕ್ಕೆ ಸಚಿವ ದಿನೇಶ್ ಗುಂಡೂರಾವ್ ಧ್ವನಿಗೂಡಿಸಿದ್ದಾರೆ. ಮುಂದಿನ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸೋಣ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮತಾಂತರ ನಿಷೇಧ ಕಾಯ್ದೆಗೂ ತಿದ್ದುಪಡಿ ತರಲು ಕ್ಯಾಬಿನೇಟ್ನಲ್ಲಿ ತೀರ್ಮಾನ ಮಾಡಲಾಗಿದೆ. ಬಿಜೆಪಿ ಸರ್ಕಾರ ಮತಾಂತರ ನಿಷೇಧ ಕಾಯ್ದೆಯಲ್ಲಿ ಸೇರಿಸಿದ್ದ ಅಂಶಗಳನ್ನು ಕೈಬಿಟ್ಟು ತಿದ್ದುಪಡಿ ಮಾಡಲು ನಿರ್ಧಾರ ಮಾಡಲಾಗಿದ್ದು, ಜುಲೈ ಅಧಿವೇಶನದಲ್ಲಿ ತಿದ್ದುಪಡಿ ಮಸೂದೆ ಮಂಡನೆ ಮಾಡಲು ನಿರ್ಧರಿಸಲಾಗಿದೆ. ಗಂಗಾ ಕಲ್ಯಾಣ ಯೋಜನೆ ಅಕ್ರಮದ ಬಗ್ಗೆಯೂ ತನಿಖೆಗೆ ತೀರ್ಮಾನಿಸಲಾಗಿದೆ.