ಸತತ ನಾಲ್ಕು ಬಾರಿ ಜಯಗ ಳಿಸಿರುವ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಇಂದು ಉಪ್ಪಾರ ಸಮುದಾಯದ ಮುಖಂಡರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಚಾಮರಾಜನಗರದಲ್ಲಿ ಹೆದ್ದಾರಿ ಸಂಚಾರ ತಡೆದು ಪ್ರತಿಭಟನೆ ನಡೆಸಿದರು. ನಗರದ ಶ್ರೀ ಚಾಮರಾಜೇಶ್ವರಸ್ವಾಮಿ ದೇಗುಲದ ಎದುರು ಬಾರಿ ಸಂಖ್ಯೆಯಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡದೇ ಕಾಂಗ್ರೆಸ್ ಹೈಕಮಾಂಡ್ ಅನ್ಯಾಯಮಾಡಿದೆ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಅಲ್ಲಿಂದ ಮೆರವಣಿಗೆ ಹೊರಟು ರಾಷ್ಟ್ರೀಯ ಹೆದ್ದಾರಿ-209 ಹಾದು ಹೋಗಿರುವ ಶ್ರೀಭುವನೇಶ್ವರಿ ವೃತ್ತಕ್ಕೆ ತೆರಳಿ ಹೆದ್ದಾರಿ ಸಂಚಾರ ತಡೆ ನಡೆಸಿದರು.
ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಸಚಿವ ಸ್ಥಾನ ಕೊಡುವುದಾಗಿ ಹೇಳಿದ್ದರು. ಆದರೆ ಕೊನೆ ಹಂತದಲ್ಲಿ ಅವರನ್ನು ಸಚಿವ ಸ್ಥಾನದಿಂದ ಕೈಬಿಡಲಾಗಿದೆ. ನಮಗೆ ಕಾಂಗ್ರೆಸ್ ಮೇಲೆ ನಂಬಿಕೆ, ಅಭಿಮಾನವಿದೆ, ರಾಜ್ಯಾದ್ಯಂತ 35ರಿಂದ 40ಲಕ್ಷ ಉಪ್ಪಾರ ಸಮುದಾಯದವರಿದ್ದೇವೆ. ಕಾಂಗ್ರೆಸ್ ಹೈಕಮಾಂಡ್ ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಶಾಸಕ ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು. ಇದೇ ಸಂದರ್ಭದಲ್ಲಿ ನೂರಾರು ಸಂಖ್ಯೆಯಲ್ಲಿ ಉಪ್ಪಾರ ಸಮುದಾಯದ ಮುಖಂಡರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಇದ್ದರು.