ಬೆಳಗಾವಿ : ವಿದ್ಯುತ್ ದರ ಏರಿಕೆ ಖಂಡಿಸಿ ಬೆಳಗಾವಿ ನಗರದಲ್ಲಿ ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದಿಂದ ಪ್ರತಿಭಟನಾ ರ್ಯಾಲಿ ನಡೆಯುತ್ತಿದೆ. ಬೆಳಗಾವಿಯ ಚೆನ್ನಮ್ಮ ವೃತ್ತದಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಸಲಾಗುತ್ತಿದೆ. ವಿಧಾನಸಭೆ ಚುನಾವಣೆ ವರೆಗೆ ಕನಿಷ್ಠ ಶುಲ್ಕ 90 ರೂಪಾಯಿ ಇತ್ತು. ಮತದಾನ ಮರುದಿನವೇ KERC ಕನಿಷ್ಠ ಶುಲ್ಕ 140 ರೂ.ಗೆ ಏರಿಕೆ ಮಾಡಲಾಗಿದೆ. ಕೆಇಆರ್ಸಿ ನಿರ್ಧಾರಕ್ಕೆ ರಾಜ್ಯ ಸರ್ಕಾರ ತಕ್ಷಣವೇ ತಡೆ ನೀಡಬೇಕು.
ಹೆಚ್ಚಳವಾಗಿರುವ ಶುಲ್ಕ ಕೈಬಿಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸುತ್ತಿದ್ದಾರೆ. ಅಲ್ಲದೆ, ಕಾಂಗ್ರೆಸ್ ಸರ್ಕಾರ ಬಂದರೆ ನೇಕಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವ ಭರವಸೆ ನೀಡಲಾಗಿತ್ತು. ಸದ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ತಾವು ನೀಡಿದ ಭರವಸೆ ಈಡೇರಿಸುವಂತೆ ಆಗ್ರಹಿಸುತ್ತಿದ್ದಾರೆ. ಸಾಲಕ್ಕೆ ಬೇಸತ್ತು ರಾಜ್ಯದ 42 ನೇಕಾರರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ನೇಕಾರ ಕುಟುಂಬಕ್ಕೆ ಸರ್ಕಾರ 10 ಲಕ್ಷ ರೂ. ಪರಿಹಾರ ನೀಡಬೇಕು. 10 ಎಚ್ಪಿವರೆಗೆ ಉಚಿತ ವಿದ್ಯುತ್ ನೀಡಬೇಕೆಂದು ಆಗ್ರಹಿಸುತ್ತಿದ್ದಾರೆ.