ಬೆಂಗಳೂರು:- ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ತೀರ್ಪು ಪ್ರಕಟವಾಗಲಿದ್ದು, ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಆಗಲಿದೆ.
ಹಲವು ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿಗಳ ಕುರಿತ ತೀರ್ಪನ್ನು ಹೈಕೋರ್ಟ್ ಇಂದು ಪ್ರಕಟಿಸಲಿದೆ. ಸರ್ಕಾರದ ಆದೇಶ ರದ್ದು ಕೋರಿ ಎನ್.ವಿ.ಚಂದನ್ ಸೇರಿದಂತೆ ಪಿಎಸ್ಐ ಆಯ್ಕೆ ಪಟ್ಟಿಯಲ್ಲಿ ಹೆಸರಿದ್ದ 100 ಅಧಿಕ ಅಭ್ಯರ್ಥಿಗಳು ಸಲ್ಲಿಸಿರುವ ತಕರಾರು ಅರ್ಜಿಗಳ ವಿಚಾರಣೆಯನ್ನು 2023ರ ಅ.26ರಂದು ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಲಾಗಿದೆ. ನ್ಯಾಯಮೂರ್ತಿಗಳಾದ ಪಿ.ಎಸ್.ದಿನೇಶ್ ಕುಮಾರ್ ಅವರ ನೇತೃತ್ವದ ವಿಭಾಗೀಯ ಪೀಠ, ಶುಕ್ರವಾರ ಮಧ್ಯಾಹ್ನ ತೀರ್ಪು ಹೊರಹಾಕಲಿದೆ.
ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ಲಿಖಿತ ಪರೀಕ್ಷೆ ರದ್ದುಪಡಿಸಿ, ಮರುಪರೀಕ್ಷೆ ನಡೆಸುವುದಾಗಿ 2022ರ ಏ.29ರಂದು ಅಂದಿನ ಬಿಜೆಪಿ ಸರ್ಕಾರ ಆದೇಶಿಸಿತ್ತು. ಇದಕ್ಕೆ ಪಿಎಸ್ಐ ಆಗಿ ಆಯ್ಕೆಯಾಗಿದ್ದ ಅಭ್ಯರ್ಥಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಕಳಂಕಿತ ಮತ್ತು ಕಳಂಕರಹಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ, ನೇಮಕಾತಿ ಆದೇಶ ನೀಡುವಂತೆ ಒತ್ತಾಯಿಸಿದ್ದರು. ಬಳಿಕ ಸರ್ಕಾರದ ಆದೇಶ ರದ್ದು ಕೋರಿ ಆಯ್ಕೆಯಾಗಿದ್ದ ಕೆಲ ಅಭ್ಯರ್ಥಿಗಳು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿಗೆ (ಕೆಎಟಿ) ಅರ್ಜಿ ಸಲ್ಲಿಸಿದ್ದರು. ಆದರೆ ಈ ಅರ್ಜಿಯನ್ನು 2022ರ ಜು.19ರಂದು ಕೆಎಟಿ ವಜಾಗೊಳಿಸಿತ್ತು. ಇದರಿಂದ ಅಭ್ಯರ್ಥಿಗಳು ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್, ಪಿಎಸ್ಐ ನೇಮಕಾತಿಗೆ ಹೊಸದಾಗಿ ಲಿಖಿತ ಪರಿಕ್ಷೆ ನಡೆಸುವ ಸರ್ಕಾರದ ಆದೇಶಕ್ಕೆ 2022ರ ಸೆ.27ರಂದು ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಬಳಿಕ ಆ ತಡೆಯಾಜ್ಞೆ ವಿಸ್ತರಣೆಯಾಗುತ್ತಾ ಬಂದಿದೆ. ವಿಭಾಗೀಯ ಪೀಠವು ಅರ್ಜಿಗಳ ವಿಚಾರಣೆಯನ್ನು 2023ರ ಅ.26ರಂದು ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತ್ತು.
ಇಂದು ಹೈಕೋರ್ಟ್ ನೀಡುವ ಮಹತ್ವದ ತೀರ್ಪಿಗಾಗಿ ಪಿಎಸ್ಐ ಆಕಾಂಕ್ಷಿತರು, ಅಭ್ಯರ್ಥಿಗಳು ಕುತೂಹಲದಿಂದ ಎದುರು ನೋಡುತ್ತಿದ್ದಾರೆ. ಈ ತೀರ್ಪಿನ ಮೇಲೆ ಆಯ್ಕೆಯಾದ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.