ಬೆಂಗಳೂರು ;- ಪಿಎಸ್ಐ ಮರುಪರೀಕ್ಷೆ ಪ್ರಶ್ನಿಸಿ ಬೆಂಗಳೂರಿನ ಹೈಕೋರ್ಟ್ ಗೆ ಸಲ್ಲಿಕೆ ಆಗಿದ್ದ ಅರ್ಜಿ ವಿಚಾರಣೆ ಜುಲೈ 12ಕ್ಕೆ ನಡೆಯಲಿದೆ.
ನೂರಾರು ಅಭ್ಯರ್ಥಿಗಳು ಅರ್ಜಿಗಳು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ. ನರೇಂದರ್ ಮತ್ತು ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ನೇತೃತ್ವದ ವಿಭಾಗೀಯ ಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿದ್ದವು.
ಇದರ ವಿಚಾರಣೆ ವೇಳೆ ಸರ್ಕಾರದ ಹೆಚ್ಚುವರಿ ಅಡ್ವೊಕೇಟ್ ಜನರಲ್ ರೊಬೆನ್ ಜಾಕಬ್ ಹಾಜರಾಗಿ, ಪರೀಕ್ಷೆಯಲ್ಲಿ ಆಯ್ಕೆಯಾಗಿರುವ ಯಾವುದೇ ಆರೋಪಕ್ಕೆ ಗುರಿಯಾಗದ ಅಭ್ಯರ್ಥಿಗಳಿಗೆ ಮತ್ತೊಂದು ಪರೀಕ್ಷೆ ನಡೆಸದಿರಲು ಕೈಗೊಂಡಿರುವ ನಿರ್ಧಾರಕ್ಕೆ ಸಂಬಂಧಿಸಿದಂತೆ ಪೂರಕವಾಗಿ ಕಾರಣಗಳನ್ನು ವಿವರಿಸಿ ನ್ಯಾಯಾಲಯಕ್ಕೆ ಆಕ್ಷೇಪಣೆ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು.
ಅರ್ಜಿದಾರರ ಪರ ವಕೀಲರು, ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ಕಕ್ಷಿದಾರರ ವಿರುದ್ಧ ರಾಜ್ಯದ ಯಾವುದೇ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿಲ್ಲ. ಆರೋಪಿಗಳ ವಿರುದ್ಧ ಯಾವೆಲ್ಲಾ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ. ಅವುಗಳ ಸ್ಥಿತಿಗತಿ ಕುರಿತ ಮಾಹಿತಿ ಒಳಗೊಂಡ ಪ್ರಮಾಣ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದು ತಿಳಿಸಿದರು. ಈ ಅಂಶಗಳನ್ನು ದಾಖಲಿಸಿಕೊಂಡ ನ್ಯಾಯಪೀಠ, ಉಭಯ ಪಕ್ಷಕಾರರು ಸಲ್ಲಿಸಿರುವ ದಾಖಲೆಗಳನ್ನು ಪರಸ್ಪರ ಹಂಚಿಕೊಳ್ಳಬೇಕು ಎಂದು ನಿರ್ದೇಶಿಸಿ ವಿಚಾರಣೆಯನ್ನು ಜುಲೈ 12ಕ್ಕೆ ಮುಂದೂಡಿತು.