ಚುನಾವಣಾ ಪ್ರಕ್ರಿಯೆ ಚಾಲನೆಯಲ್ಲಿರುವಾಗಲೇ ಬೆಂಗಳೂರಿನಲ್ಲಿ ಅತ್ಯಾಚಾರ, ಕೊಲೆಗಳು ನಿರ್ಭೀತಿಯಿಂದ ನಡೆಯುತ್ತಿವೆ. ಇದು ಕಳವಳಕಾರಿ ಸಂಗತಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಈ ಸರ್ಕಾರದಲ್ಲಿ ನ್ಯಾಯಯುತವಾಗಿ ಚುನಾವಣೆ ನಡೆಯುವುದು ಡೌಟು. ಚುನಾವಣಾ ಆಯೋಗ ಈ ಬೆಳವಣಿಗೆಗಳನ್ನು ಗಂಭೀರವಾಗಿ ಪರಿಗಣಿಸಲಿ ಎಂದರು. ಧರ್ಮ ರಕ್ಷಣೆ ಹೆಸರಿನಲ್ಲಿ ರಾಜ್ಯದಲ್ಲಿ ಬಿಜೆಪಿ ಗೂಂಡಾ ಸಂಸ್ಕೃತಿ ಬೆಳೆಸಿತ್ತು. ಗೂಂಡಾ ಸಂಸ್ಕೃತಿಗೆ ಸಾತನೂರು ಬಳಿ ನಡೆದ ಯುವಕನ ಹತ್ಯೆಯೇ ಸಾಕ್ಷಿ.
ಹತ್ಯೆಯ ಹೊಣೆಯನ್ನು ಅಸಮರ್ಥ ಗೃಹ ಸಚಿವ ಆರಗರೇ ಹೊರಬೇಕು. ಅಸಮರ್ಥ, ಅದಕ್ಷ, ಬೇಜವಾಬ್ದಾರಿ ಗೃಹಸಚಿವರನ್ನು ಎಂದೂ ನೋಡಿರಲಿಲ್ಲ. ತನ್ನ ಇಲಾಖೆ ಮೇಲೆ ಗೃಹ ಸಚಿವ ಆರಗ ಜ್ಞಾನೇಂದ್ರಗೆ ನಿಯಂತ್ರಣವೇ ಇಲ್ಲ. ಇಂಥ ಸಚಿವರಿಗೆ ರಾಜ್ಯದ ಶಾಂತಿ, ಸುವ್ಯವಸ್ಥೆಯನ್ನು ನಿರ್ವಹಿಸಲು ಸಾಧ್ಯವೇ? ಕೂಡಲೇ ಗೃಹ ಸಚಿವ ಆರಗ ಜ್ಞಾನೇಂದ್ರರನ್ನು ಸಂಪುಟದಿಂದ ಕಿತ್ತುಹಾಕಲಿ. ಗೋರಕ್ಷಣೆಯ ಹೆಸರಲ್ಲಿ ನಡೆದ ಕೊಲೆ ಕೇವಲ ಹುಚ್ಚಾಟ ಆಗಿರಲಾರದು. ಇದು ಚುನಾವಣಾ ದಿನಗಳಲ್ಲಿ ಕೋಮುದ್ವೇಷವನ್ನು ಬಡಿದೆಬ್ಬಿಸುವ ಯೋಜಿತ ಸಂಚಿನ ಭಾಗವಾಗಿರುವ ಸಾಧ್ಯತೆ ಇದೆ. ಹೀಗಾಗಿ ಪೊಲೀಸರು ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಸಬೇಕಿದೆ ಎಂದರು.