ಬೆಂಗಳೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರ ಆದೇಶವನ್ನು ವಜಾಗೊಳಿಸುವಂತೆ ಕೋರಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ಕುರಿತು ಇಂದು ವಿಚಾರಣೆ ನಡೆಯಲಿದೆ. ಗುರುವಾರ ವಿಚಾರಣೆ ನಡೆಸಿದ್ದ ಹೈಕೋರ್ಟ್ ಮತ್ತೆ ಶನಿವಾರಕ್ಕೆ ಮುಂದೂಡಿತ್ತು.
ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ಗೆ ನೀಡಿರುವ ಅನುಮತಿ ಬಗ್ಗೆ ಇಂದು ಭವಿಷ್ಯ ನಿರ್ಧಾರವಾಗಲಿದೆ ಎಂದು ಹೇಳಲಾಗುತ್ತಿದೆ. ಇಂದು ಬೆಳಗ್ಗೆ 10.30ಕ್ಕೆ ಅರ್ಜಿಯ ವಿಚಾರಣೆ ನಡೆಯಲಿದೆ. ಸಿದ್ದರಾಮಯ್ಯ ಪರವಾಗಿ ಗುರುವಾರ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದ್ದರು. ಇಂದು ಪ್ರತಿವಾದಿಗಳ ಪರ ವಕೀಲರು ವಾದ ಮಂಡಿಸಲಿದ್ದಾರೆ. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪರವಾಗಿ ಕೇಂದ್ರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ದೂರುದಾರ ಪ್ರದೀಪ್ ಪರವಾಗಿ ಪ್ರಭುಲಿಂದ ನಾವದಗಿ, ಸ್ನೇಹಮಯಿ ಕೃಷ್ಣ ಪರವಾಗಿ ಲಕ್ಷ್ಮೀ ಐಯ್ಯಂಗಾರ್ ಮತ್ತು ಟಿ ಜೆ ಅಬ್ರಾಹಂ ಪರವಾಗಿ ರಂಗನಾಥ ರೆಡ್ಡಿ ವಾದ ಮಂಡಿಸಲಿದ್ದಾರೆ.
ಆಗಸ್ಟ್ 19ರಂದು ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್, ಆಗಸ್ಟ್ 29ರ ತನಕ ಯಾವುದೇ ಕ್ರಮ ತೆಗೆದುಕೊಳ್ಳಬಾರದು ಎಂದು ಅಧೀನ ನ್ಯಾಯಾಲಯಕ್ಕೆ ಸೂಚನೆ ನೀಡಿ, ವಿಚಾರಣೆ ಮುಂದೂಡಿತ್ತು. ಗುರುವಾರ ಎರಡೂ ಕಡೆ ವಾದ ಆಲಿಸಿದ ನ್ಯಾಯಾದೀಶ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆಯನ್ನ ಆಗಸ್ಟ್ 31ಕ್ಕೆ ಮುಂದೂಡಿದರು. ಶನಿವಾರ ಬೆಳಗ್ಗೆ 10:30ಕ್ಕೆ ವಿಚಾರಣೆ ನಡೆಯಲಿದೆ. ಅಲ್ಲಿಯ ತನಕ ಈ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ನೀಡಿದ್ದ ಮಧ್ಯಂತರ ಆದೇಶವನ್ನು ವಿಸ್ತರಣೆ ಮಾಡಿದ್ದರು