ಮಂಡ್ಯ: ಕಳಪೆ ಬಿತ್ತನೆ ಬೀಜ ಮತ್ತು ರಸಗೊಬ್ಬರ ಮಾರಾಟ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಕಳಪೆ ಬೀಜ, ಗೊಬ್ಬರ ಮಾರಾಟಗಾರರ ಪರವಾನಗಿ ರದ್ದು ಮಾಡಲಾಗುವುದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ(Chaluvarayaswamy) ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಕಳಪೆ ಬಿತ್ತನೆ ಬೀಜ ಮತ್ತು ರಸಗೊಬ್ಬರ ಮಾರಾಟ ಮಾಡದಂತೆ ನಿಗಾ ವಹಿಸಲು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ವಿಚಕ್ಷಣ ದಳ ರಚನೆ ಮಾಡಲಾಗಿದೆ. ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು, ಉಪ ನಿರ್ದೇಶಕರು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಕಳೆದ 4 ವರ್ಷಗಳಲ್ಲಿ ಕಳಪೆ ಬಿತ್ತನೆ ಬೀಜ ಮಾರಾಟ ಮಾಡಿದ 61 ಪ್ರಕರಣಗಳು ಹಾಗೂ,
ಕಳಪೆ ರಸಗೊಬ್ಬರ ಮಾರಿದ 26 ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಾಗಿದೆ. ಕಳಪೆ ಗುಣಮಟ್ಟದ ರಸಗೊಬ್ಬರ ಮಾದರಿಗಳ ವಿರುದ್ಧ 187 ಪ್ರಕರಣ, ಕಡಿಮೆ ಗುಣಮಟ್ಟದ ಬೀಜಗಳ ವಿರುದ್ಧ 774 ಪ್ರಕರಣ ದಾಖಲಿಸಲಾಗಿದೆ. ಇನ್ನು 19 ಪ್ರಕರಣಗಳಿಗೆ ಮೊಕದ್ದಮೆ ದಾಖಲಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಸಚಿವರು ತಿಳಿಸಿದ್ದಾರೆ.