ವಿಶಾಖಪಟ್ಟಣಂ: ಆಸ್ಟ್ರೇಲಿಯಾ ವಿರುದ್ಧ ಮೊದಲನೇ ಪಂದ್ಯದಲ್ಲಿ ಗೆಲುವು ಪಡೆಯುವ ಮೂಲಕ ಭಾರತ ತಂಡ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ. ಇದೀಗ ಉಭಯ ತಂಡಗಳು ಭಾನುವಾರ ಇಲ್ಲಿನ ಆಂಧ್ರ ಕ್ರಿಕೆಟ್ ಅಸೋಸಿಯೇಷನ್ನಲ್ಲಿ ಮೈದಾನದಲ್ಲಿ ನಡೆಯುವ ಎರಡನೇ ಪಂದ್ಯಕ್ಕೆ ಸಜ್ಜಾಗುತ್ತಿವೆ.
ಕೌಟುಂಬಿಕ ಕಾರಣಗಳಿಂದ ರೋಹಿತ್ ಶರ್ಮಾ ಅವರು ಮೊದಲನೇ ಏಕದಿನ ಪಂದ್ಯಕ್ಕೆ ಅಲಭ್ಯರಾಗಿದ್ದರು. ಈ ಹಿನ್ನೆಲೆಯಲ್ಲಿ ಹಾರ್ದಿಕ್ ಪಾಂಡ್ಯ ತಂಡವನ್ನು ಮುನ್ನಡೆಸುವ ಮೂಲಕ ಯಶಸ್ವಿಯಾಗಿದ್ದರು. ಇದೀಗ ಎರಡನೇ ಪಂದ್ಯಕ್ಕೆ ರೋಹಿತ್ ಶರ್ಮಾ ಮರಳುವ ಮೂಲಕ ತಂಡದ ನಾಯಕತ್ವದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.
ಮೊಹಮ್ಮದ್ ಶಮಿ ಹಾಗೂ ಮೊಹಮ್ಮದ್ ಸಿರಾಜ್ ಬೌಲಿಂಗ್ನಲ್ಲಿ ಮಿಂಚಿನ ದಾಳಿ ಹಾಗೂ ಕೆ.ಎಲ್ ರಾಹುಲ್ ಹಾಗೂ ರವೀಂದ್ರ ಜಡೇಜಾ ಅದ್ಭುತ ಬ್ಯಾಟಿಂಗ್ ಸಹಾಯದಿಂದ ಟೀಮ್ ಇಂಡಿಯಾ, ಆರಂಭಿಕ ಪಂದ್ಯದಲ್ಲಿ ಐದು ವಿಕೆಟ್ಗಳ ರೋಚಕ ಗೆಲುವು ಸಾಧಿಸಿತ್ತು. ಶಮಿ ಹಾಗೂ ಸಿರಾಜ್ ತಲಾ ಮೂರು ವಿಕೆಟ್ಗಳನ್ನು ಪಡೆದುಕೊಂಡಿದ್ದರು. ಆ ಮೂಲಕ ಆಸ್ಟ್ರೇಲಿಯಾ ತಂಡವನ್ನು 188ಕ್ಕೆ ಆಲ್ಔಟ್ ಮಾಡುವಲ್ಲಿ ಸಫಲರಾಗಿದ್ದರು.
ಬಳಿಕ ಗುರಿ ಹಿಂಬಾಲಿಸಿದ್ದ ಭಾರತ ತಂಡ ಆರಂಭದಲ್ಲಿಯೇ ಪ್ರಮುಖ ವಿಕೆಟ್ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆದರೆ, ಆರನೇ ವಿಕೆಟ್ಗೆ ಜೊತೆಯಾದ ಕೆಎಲ್ ರಾಹುಲ್ ಹಾಗೂ ರವೀಂದ್ರ ಜಡೇಜಾ ಕ್ರಮವಾಗಿ 75* ಹಾಗೂ 45* ರನ್ ಗಳಿಸುವ ಜೊತೆಗೆ 108 ರನ್ಗಳ ಜೊತೆಯಾಟವನ್ನು ಆಡುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಬೌಲಿಂಗ್ನಲ್ಲಿಯೂ ಎರಡು ವಿಕೆಟ್ ಪಡೆದಿದ್ದ ರವೀಂದ್ರ ಜಡೇಜಾ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು.
ಇಶಾನ್ ಕಿಶನ್ ಔಟ್
ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಮೊದಲನೇ ಏಕದಿನ ಪಂದ್ಯದಲ್ಲಿ ಇನಿಂಗ್ಸ್ ಆರಂಭಿಸಿದ್ದ ಇಶಾನ್ ಕಿಶನ್ ಎರಡನೇ ಪಂದ್ಯದಲ್ಲಿ ತಮ್ಮ ಸ್ಥಾನವನ್ನು ನಾಯಕನಿಗೆ ಬಿಟ್ಟುಕೊಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಶುಭಮನ್ ಗಿಲ್ ಹಾಗೂ ರೋಹಿತ್ ಶರ್ಮಾ ಇನಿಂಗ್ಸ್ ಆರಂಭಿಸಲಿದ್ದಾರೆ. ಕಳೆದ ವರ್ಷ ಬಾಂಗ್ಲಾದೇಶ ವಿರುದ್ಧ ದ್ವಿಶತಕ ಸಿಡಿಸಿದ್ದ ಇಶಾನ್ ಕಿಶನ್ ಆರಂಭಿಕ ಪಂದ್ಯದಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದರು. ಟೆಸ್ಟ್ ಸರಣಿಯಲ್ಲಿ ಶತಕ ಸಿಡಿಸಿದ್ದ ರೋಹಿತ್ ಶರ್ಮಾ ಅದೇ ಲಯವನ್ನು ಈ ಪಂದ್ಯದಲ್ಲಿಯೂ ಮುಂದುವರಿಸಲು ಎದುರು ನೋಡುತ್ತಿದ್ದಾರೆ.