ಬೆಂಗಳೂರು ;- ರಾಜ್ಯದಲ್ಲಿ ಶಕ್ತಿ ಯೋಜನೆ ಸಕ್ಸಸ್ ಆಗಿದ್ದು, ತಿಂಗಳಲ್ಲೇ 16.73 ಕೋಟಿ ಮಹಿಳೆಯರು ಪ್ರಯಾಣ ಮಾಡಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹರ್ಷ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ವರೆಗೂ 16.73 ಕೋಟಿ ಮಹಿಳಾ ಪ್ರಯಾಣಿಕರು ಉಚಿತ ಪ್ರಯಾಣದ ಟಿಕೆಟ್ ಮೌಲ್ಯ 401.94 ಕೋಟಿಯಾಗಿದೆ ಎಂಬ ಮಾಹಿತಿ ಹಂಚಿಕೊಂಡ ಸಚಿವರು ಯೋಜನೆ ಯಶಸ್ವಿಗೆ ಸಹಕರಿಸಿದ ಪ್ರಯಾಣಿಕರು ಮತ್ತು ಸಿಬ್ಬಂದಿ ಕಾರ್ಯಕ್ಕೆ ಹರ್ಷ ವ್ಯಕ್ತಪಡಿಸಿದ್ದಾರೆ.
ಜೂನ್ 11 ರಂದು ಚಾಲನೆಗೊಂಡ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ “ಶಕ್ತಿ” ಯೋಜನೆಯು ಇಂದಿಗೆ ಒಂದು ತಿಂಗಳು ಪೂರೈಸಿದ್ದು, ಸಾರಿಗೆ ಸಂಸ್ಥೆಗಳಲ್ಲಿ ಮಹತ್ತರವಾದ ಬದಲಾವಣೆಗೆ ಕಾರಣವಾಗಿ, ಮಹಿಳಾ ಪ್ರಯಾಣಿಕರಿಂದ ಅಭೂತಪೂರ್ವ ಯಶಸ್ಸನ್ನುಗಳಿಸಿದೆ.
ಈ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಸಹಕರಿಸಿದ ನಾಲ್ಕು ಸಾರಿಗೆ ಸಂಸ್ಥೆಗಳ ಎಲ್ಲ ಅಧಿಕಾರಿ/ಸಿಬ್ಬಂದಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಸಾರ್ವಜನಿಕ ಪ್ರಯಾಣಿಕರು, ಅದರಲ್ಲಿಯೂ ಮಹಿಳಾ ಪುಯಾಣಿಕರು ಸಾರಿಗೆ ಸಂಸ್ಥೆಯ ಬಸ್ಗಳಲ್ಲಿ ಪ್ರತಿದಿನ ಪ್ರಯಾಣಿಸಿ ‘ಸಾರಿಗೆ ಬಸ್ಗಳು ಜನರ ಜೀವನಾಡಿಯೂ ಹೌದು ಹಾಗೂ ಮಹಿಳೆಯರ ಪಯಣದ ಸಾರಥಿಯೂ ಹೌದು ಎಂಬುದನ್ನು ಸಾಬೀತುಪಡಿಸಿದ್ದಾರೆ ಎಂದು ಸಾರಿಗೆ ಸಚಿವರು ಹರ್ಷ ವ್ಯಕ್ತಪಡಿಸಿದ್ದಾರೆ.