ಸಿಎಂ ಸಿದ್ದರಾಮಯ್ಯನವರು ನಿನ್ನೆ ರಾತ್ರಿ ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರನ್ನು ನವದೆಹಲಿಯಲ್ಲಿ ಭೇಟಿಯಾದರು
ಈ ವೇಳೆ ಸೇಫ್ ಸಿಟಿ ಯೋಜನೆ ಸೇರಿದಂತೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕರ್ನಾಟಕಕ್ಕೆ ಸಂಬಂಧಪಟ್ಟ ಹಲವು ಮನವಿಗಳನ್ನು ಕೇಂದ್ರ ಸಚಿವರಿಗೆ ಸಲ್ಲಿಸಿದರು
ರಾಜ್ಯದ ಪೊಲೀಸ್ ಪಡೆಯ ಬಲವರ್ಧನೆಗೆ ಸಂಬಂಧಿಸಿದ ವಿವಿಧ ಪ್ರಸ್ತಾವನೆಗಳ ಮಂಜೂರಾತಿ ಕುರಿತಂತೆ ಗಮನ ಸೆಳೆದರು. ಕರ್ನಾಟಕ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡಲು ಮತ್ತು ಸಾರ್ವಜನಿಕರ ಸುರಕ್ಷತೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರದಿಂದ ಅಗತ್ಯವಿರುವ ನೆರವಿನ ಕುರಿತ ಹಲವು ಪ್ರಸ್ತಾವನೆಗಳಿಗೆ ಅನುಮೋದನೆ ನೀಡುವಂತೆ ಮನವಿ ಮಾಡಿದರು.
ನಿರ್ಭಯಾ ನಿಧಿಯಡಿಯಲ್ಲಿ ಬೆಂಗಳೂರು ನಗರದಂತೆಯೇ ಮೈಸೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಮಂಗಳೂರು ಹಾಗೂ ಕಲಬುರಗಿ ನಗರಗಳಲ್ಲಿ ಸೇಫ್ ಸಿಟಿ ಯೋಜನೆಯನ್ನು ತಲಾ 200 ಕೋಟಿ ರೂ. ಗಳಂತೆ ಒಟ್ಟು 1000 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಕ್ಕೆ ಅನುಮೋದನೆ ನೀಡಬೇಕೆಂದು ಶಾ ಬಳಿ ಸಿದ್ದರಾಮಯ್ಯ ಆಗ್ರಹಿಸಿದರು.