ಬೆಂಗಳೂರು:- ಭ್ರಷ್ಟಾಚಾರದ ಕಳಂಕ ಮೆತ್ತಿಕೊಂಡ ಸಿದ್ದರಾಮಯ್ಯ ಕರ್ನಾಟಕಕ್ಕೆ ಮಾರಿ ಎಂದು ವಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ ಮಾಡಿದ್ದಾರೆ.
ನೆರೆ ರಾಜ್ಯ ಕೇರಳ ಪ್ರವಾಹ ಸಂತ್ರಸ್ತರಿಗೆ ಮನೆ ನಿರ್ಮಾಣ ಮಾಡುವ ವಿಚಾರವಾಗಿ ಕೇರಳ ಸಿಎಂ ಪಿಣರಾಯಿ ವಿಜಯನ್ಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಈ ವಿಚಾರಕ್ಕೆ ವಾಗ್ದಾಳಿ ಮಾಡಿರುವ ಅಶೋಕ್, ಕೇರಳಕ್ಕೆ ಉಪಕಾರಿ; ಕರ್ನಾಟಕಕ್ಕೆ ಮಾರಿ. ಭ್ರಷ್ಟಾಚಾರದ ಕಳಂಕ ಮೆತ್ತಿಕೊಂಡು, ಭಂಡತನದಿಂದ ಖುರ್ಚಿ ಉಳಿಸಿಕೊಳ್ಳಲು ಹೆಣಗಾಡುತ್ತಿರುವ ಸಿಎಂ ಸಿದ್ದರಾಮಯ್ಯ ನವರ ಸರ್ಕಾರ, ಹೈಕಮಾಂಡ್ ನಾಯಕರನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣವನ್ನು ಪೋಲು ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.
ಅಕಾಲಿಕ ಮಳೆಯಿಂದ ಬೆಳೆ ಹಾನಿಗೊಳಗಾಗಿ ಸಂಕಷ್ಟದಲ್ಲಿರುವ ರೈತತರಿಗೆ ಪರಿಹಾರ ಕೊಡಲು ಹಣವಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿ ಕಳಪೆ ಔಷಧಿಯಿಂದ ಸಾವನ್ನಪ್ಪಿರುವ ಬಾಣಂತಿ ಮಹಿಳೆಯರ ಕುಟುಂಬಗಳಿಗೆ ಪರಿಹಾರ ಕೊಟ್ಟಿಲ್ಲ. ಬೆಂಗಳೂರಿನ ಉದ್ದಗಲಕ್ಕೂ ಬಾಯ್ತೆರೆದಿರುವ ರಸ್ತೆಗುಂಡಿ ಮುಚ್ಚಲು ಹಣವಿಲ್ಲ. ಆದರೆ ಹೈಕಮಾಂಡ್ ನಾಯಕರನ್ನು ಓಲೈಸಲು ಕೇರಳದಲ್ಲಿ ಮನೆ ನಿರ್ಮಿಸಿಕೊಡಲು ಹೊರಟಿದೆ ಈ ಕಾಂಗ್ರೆಸ್ಸರ್ಕಾರ ಎಂದಿದ್ದಾರೆ.