ಬೆಂಗಳೂರು: ರಾಜ್ಯದಾದ್ಯಂತ ಇಂದಿನಿಂದ ಎಸ್ಎಸ್ಎಲ್ಸಿ(SSLC) ಪರೀಕ್ಷೆಗಳು ಆರಂಭಗೊಳ್ಳುತ್ತಿದ್ದು, ಮೊದಲ ದಿನ ಪ್ರಥಮ ಭಾಷೆ ಪರೀಕ್ಷೆ ನಡೆಯಲಿದೆ. ಕನಿಷ್ಟ ಒಂದು ಗಂಟೆಗೂ ಮೊದಲೇ ಪರೀಕ್ಷಾ ಕೇಂದ್ರಗಳಿಗೆ ಪ್ರವೇಶ ಪತ್ರದ ಜತೆಗೆ ತೆರಳಿ ಪರೀಕ್ಷಾ ಕೊಠಡಿಯನ್ನು ಹುಡಿಕಿಕೊಳ್ಳಬೇಕಿದೆ.
ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ 10ನೇ ತರಗತಿಯ ಪರೀಕ್ಷೆಗಳು ನಡೆಯಲಿವೆ.
8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆ ಬರೆಯಲಿರುವ 8,42,811 ವಿದ್ಯಾರ್ಥಿಗಳ ಪೈಕಿ 4,52,732 ಬಾಲಕರು ಮತ್ತು 4,21,110 ಮಂದಿ ಬಾಲಕಿಯರು ಪರೀಕ್ಷೆ ಬರೆಯಲಿದ್ದಾರೆ.
ಪರೀಕ್ಷೆಗೆ 15,387 ಶಾಲೆಗಳು ನೋಂದಾಯಿಸಿಕೊಂಡಿದ್ದು, 3,305 ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45ರವರೆಗೆ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತ 144ನೇ ಸೆಕ್ಷನ್ ಅನ್ವಯ ನಿರ್ಬಂಧ ಆದೇಶ ಜಾರಿ ಮಾಡಲಾಗಿದೆ.
ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಿಗಿಭದ್ರತೆ ವ್ಯವಸ್ಥೆ ಮಾಡಲಾಗಿದ್ದು, ಪರೀಕ್ಷಾ ಕೊಠಡಿಗಳಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೇವೆ ಕಲ್ಪಿಸಲಾಗಿದೆ.
ಈ ನಡುವೆ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು ಶುಭ ಹಾರೈಸಿದ್ದಾರೆ.
ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲಿರುವ ನನ್ನೆಲ್ಲಾ ಪ್ರಿಯ ವಿದ್ಯಾರ್ಥಿಗಳಿಗೆ ಶುಭ ಹಾರೈಕೆಗಳು. ಧೈರ್ಯ ಮತ್ತು ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ. ಯಶಸ್ಸು ನಿಮ್ಮದಾಗಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.