ಬೆಂಗಳೂರು: ಸಾಹಿತಿಗಳಿಗೆ ಬೆದರಿಕೆ ಹಾಕುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ ನಿನ್ನೆ ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ 40ಕ್ಕೂ ಹೆಚ್ಚು ಮಂದಿ ಹಿರಿಯ ಸಾಹಿತಿಗಳು, ಬರಹಗಾರರು ಹಾಗೂ ಜನಪರ ಸಂಘಟನೆಗಳ ಮುಖ್ಯಸ್ಥರ ಜತೆಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ಕನ್ನಡ ನಾಡಿನ ಸೌಹಾರ್ದ ಮತ್ತು ಜಾತ್ಯತೀತ ಪರಂಪರೆಯ ರಕ್ಷಣೆ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ.
ದ್ವೇಷ ರಾಜಕಾರಣವನ್ನು ಬಲಿ ಹಾಕಿ, ಭಯದ ವಾತಾವರಣ ಅಳಿಸಲಾಗುವುದು’ ಎಂದು ತಿಳಿಸಿದರು. ದೇಶವನ್ನು ಅಪಾಯದ ಸುಳಿಗೆ ದೂಡುತ್ತಾ, ಈ ಮಣ್ಣಿನ ಬಹುತ್ವವನ್ನು ನಾಶ ಮಾಡುತ್ತಿರುವ ಬಿಜೆಪಿ ಪರಿವಾರದ ವಿರುದ್ಧ ಖಚಿತ ನಿಲುವು ತೆಗೆದುಕೊಂಡು ಸ್ವಯಂಪ್ರೇರಿತವಾಗಿ ಚುನಾವಣೆಯಲ್ಲಿ ಜನರನ್ನು ಎಚ್ಚರಿಸುವ ಕೆಲಸ ಮಾಡಿದ್ದಕ್ಕಾಗಿ ಸಾಹಿತಿ-ಬರಹಗಾರರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಪಠ್ಯ ಮತ್ತು ಪಾಠಗಳ ಮೂಲಕ ಮಕ್ಕಳ ಮನಸ್ಸನ್ನು ಕಲುಷಿತಗೊಳಿಸಲು ನಡೆಸಿರುವ ಕೃತ್ಯವನ್ನು ಕ್ಷಮಿಸಲು ಸಾಧ್ಯವಿಲ್ಲ. ಶೈಕ್ಷಣಿಕ ವರ್ಷ ಆರಂಭ ಆಗಿರುವುದರಿಂದ ಮಕ್ಕಳ ಶಿಕ್ಷಣಕ್ಕೆ ತೊಂದರೆ ಆಗದಂತೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ. ಕನ್ನಡ ಹೋರಾಟಗಾರರು, ರೈತ-ಕಾರ್ಮಿಕ-ದಲಿತ ಚಳವಳಿಗಳ ಹೋರಾಟಗಾರರು ಮತ್ತು ಸಾಹಿತಿ, ಬರಹಗಾರರ ಮೇಲೆ ಹಾಕಿರುವ ಸುಳ್ಳು ಮೊಕದ್ದಮೆಗಳನ್ನು ಹಿಂದಕ್ಕೆ ಪಡೆಯಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.