ಬೆಂಗಳೂರು ;- ಕಾಂಗ್ರೆಸ್ ಗ್ಯಾರಂಟಿಗಳ ಅನುಷ್ಠಾನಕ್ಕೆ ಆಗ್ರಹಿಸಿ ಜು.4ರಂದು ಸದನದ ಒಳಗೆ, ಹೊರಗೆ ಹೋರಾಟ ಮಾಡಲಾಗುತ್ತದೆ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ನೀಡಿದ್ದ ಗ್ಯಾರಂಟಿಗಳ ಸಮರ್ಪಕ ಅನುಷ್ಠಾನಕ್ಕೆ ಆಗ್ರಹಿಸಿ, ವಿಧಾನಸೌಧದ ಮುಂದಿರುವ ಗಾಂಧಿ ಪ್ರತಿಮೆ ಬಳಿಯಲ್ಲಿ ಜುಲೈ 4ರಂದು ನಮ್ಮ ನೂರಾರು ಕಾರ್ಯಕರ್ತರು ಬೆಳಿಗ್ಗೆಯಿಂದ ಸಂಜೆವರೆಗೆ ಒಂದು ದಿನ ಧರಣಿ ಸತ್ಯಾಗ್ರಹ ಮಾಡಲಿದ್ದಾರೆ.
ಅಂದು ಬಿಜೆಪಿ ಚುನಾಯಿತ ಪ್ರತಿನಿಧಿಗಳು ಉಭಯ ಸದನದ ಒಳಗೂ ಹೋರಾಟ ಮಾಡಲಿದ್ದಾರೆ. ಕಾಂಗ್ರೆಸ್ ಪಕ್ಷವು ಮನೆ ಮನೆಗೆ ಹೋಗಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರು ಸಹಿ ಮಾಡಿ ಕೊಟ್ಟ ಗ್ಯಾರಂಟಿ ಕಾರ್ಡನ್ನು ವಿತರಿಸಿತ್ತು. ಆದರೆ ಈಗ ಷರತ್ತುಗಳನ್ನು ಪ್ರಸ್ತಾಪಿಸಿದೆ. ಕಾಂಗ್ರೆಸ್ನ ಈ ಧೋರಣೆ ಖಂಡಿಸಿ ನಾವು ಹೋರಾಟಕ್ಕೆ ಮುಂದಾಗಿದ್ದೇವೆ ಎಂದರು.
ಈಗ ಗ್ಯಾರಂಟಿಗಳ ಅಂಶಗಳನ್ನು ಚಾಚೂತಪ್ಪದೆ ಕಾಂಗ್ರೆಸ್ ಅನುಷ್ಠಾನಕ್ಕೆ ತರಬೇಕು, ಅವರು ಭರವಸೆ ಕೊಟ್ಟಂತೆ 10 ಕೆಜಿ ಅಕ್ಕಿ ಕೊಡಬೇಕು, ಎಲ್ಲ ಪದವೀಧರ ನಿರುದ್ಯೋಗಿಗಳಿಗೆ 3 ಸಾವಿರ ಭತ್ಯೆ, ಡಿಪ್ಲೊಮಾ ಮಾಡಿ ನಿರುದ್ಯೋಗಿ ಆಗಿರುವವರಿಗೆ 1500 ರೂ. ಕೊಡಬೇಕು, 200 ಯೂನಿಟ್ ಕರೆಂಟ್ ಕೊಡಲೇಬೇಕು, 80 ಯೂನಿಟ್ ಎಂಬ ಕಂಡಿಷನ್ ರದ್ದು ಮಾಡಬೇಕು. ಎಲ್ಲ ಮಹಿಳೆಯರಿಗೆ 2 ಸಾವಿರ ರೂ. ಕೊಡಬೇಕು. ಕರೆಂಟ್ ಬಿಲ್ ತೀವ್ರವಾಗಿ ಹೆಚ್ಚಾಗಿದ್ದು, ದರ ಏರಿಕೆಯನ್ನು ವಾಪಸ್ ಪಡೆಯಬೇಕು ಎಂದು ಬಿ.ಎಸ್. ಯಡಿಯೂರಪ್ಪ ಆಗ್ರಹಿಸಿದರು.