ಕ್ಯಾನ್ಸರ್ ಗೆ ಶಸ್ತ್ರ ಚಿಕಿತ್ಸೆಗಾಗಿ ಅಮೆರಿಕಾಗೆ ತೆರಳಿದ್ದ ಶಿವರಾಜ್ ಕುಮಾರ್ ಅವರ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ. ಅಮೆರಿಕದ ಮಿಯಾಮಿ ಕ್ಯಾನ್ಸರ್ ಸೆಂಟರ್ ನಲ್ಲಿ ವೈದ್ಯ ಮುರುಗೇಶ್ ಅವರ ತಂಡ ಶಿವಣ್ಣನಿಗೆ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿದ್ದು ಇದೀಗ ಶಿವರಾಜ್ ಕುಮಾರ್ ಕಿರಿಯ ಪುತ್ರಿ ನಿವೇದಿತಾ ಅಪ್ಪನ ಆರೋಗ್ಯದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ ಜೊತೆಗೆ ಅಭಿಮಾನಿಗಳು ಸೇರಿದಂತೆ ಹಲವರಿಗೆ ಧನ್ಯವಾದ ಹೇಳಿದ್ದಾರೆ.
ದೇವರ ಕೃಪೆಯಿಂದ ನನ್ನ ತಂದೆಯ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ಸಂಪೂರ್ಣಗೊಂಡಿದೆ. ಈಗ ಅವರ ಆರೋಗ್ಯ ಸ್ಥಿರವಾಗಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ಪ್ರಮುಖ ಕಾರಣರಾಗಿರುವ, ಮಿಯಾಮಿ ಹೆಲ್ತ್ ಕೇರ್ ನಲ್ಲಿ ಅಸಾಧಾರಣ ಸೇವೆ ಒದಗಿಸಿದ ವೈದ್ಯಕೀಯ ತಂಡ ಮತ್ತು ಡಾ. ಮುರುಗೇಸನ್ ಮನೋಹರನ್ ಅವರ ಅಚಲ ಬೆಂಬಲ ಮತ್ತು ಕಾಳಜಿಗೆ ನಮ್ಮ ಹೃತ್ತೂರ್ವಕ ಧನ್ಯಾದಗಳನ್ನು ಅರ್ಪಿಸುತ್ತೇವೆ.
ಈ ಪ್ರಯಾಣದಲ್ಲಿ ನನ್ನ ತಂದೆ ತೋರಿದ ಧೈರ್ಯ ಮತ್ತು ಶಕ್ತಿಗೆ ಅವರೇ ಸಾಟಿ. ಈ ಸವಾಲುಗಳನ್ನು ಎದುರಿಸುವಲ್ಲಿ ಅವರು ತೋರಿದ ಮನೋಬಲ ಮಗೂ ಆಶಾಭಾವ ಮೂಡಿಸಿ ನಮ್ಮೆಲ್ಲರಿಗೂ ಧೈರ್ಯ ಒದಗಿಸಿದೆ. ಇದರ ನಡುವೆ, ಎಲ್ಲಾ ಅಭಿಮಾನಿ ದೇವರುಗಳಿಗೂ, ಕುಟುಂಬ ಸದಸ್ಯರಿಗೂ, ಸ್ನೇಹಿತರಿಗೂ ಮತ್ತು ಮಾಧ್ಯಮದ ಸದಸ್ಯರಿಗೂ ನಾವು ನಮ್ಮ ತುಂಬು ಹೃದಯದ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇವೆ. ನಿಮ್ಮೆಲ್ಲರ ಪ್ರೀತಿ, ಪ್ರಾರ್ಥನೆ ಮತ್ತು ಆಶೀರ್ವಾದ ನಮ್ಮ ಶಕ್ತಿಯ ಮೂಲವಾಗಿವೆ. ನೀವೆಲ್ಲರೂ ತೋರಿದ ಕಾಳಜಿ ನಮಗೆ ಮುನ್ನಡೆಯುವ ಬಲ ತುಂಬಿದ್ದು, ಅದಕ್ಕೆ ನಾವೆಂದೆಂದಿಗೂ ಆಭಾರಿಯಾಗಿರುತ್ತೇವೆ. ತಂದೆಯ ಚೇತರಿಕೆಯ ಕುರಿತು ಬರುವ ದಿನಗಳಲ್ಲಿ ತಿಳಿಸುತ್ತೇವೆ. ಈ ಪಯಣದಲ್ಲಿ ನಾವು ಮುಂದಿನ ಹೆಜ್ಜೆ ಇಡುತ್ತಿರಲು, ನಿಮ್ಮ ಪ್ರಾರ್ಥನೆಯ ಮೂಲಕ ನಮ್ಮನ್ನು ಆಶೀರ್ವದಿಸಿ ಎಂದು ಕೇಳಿಕೊಳ್ಳುತ್ತೇವೆ, ಧನ್ಯವಾದಗಳು’ ಎಂದಿದ್ದಾರೆ ನಿವೇದಿತಾ ಶಿವರಾಜಕುಮಾರ್.
ಶಿವರಾಜ್ ಕುಮಾರ್ ಅವರು ಬ್ಲಾಡರ್ ಕ್ಯಾನ್ಸರ್’ನಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ಕೆಲ ದಿನಗಳ ಹಿಂದೆ ಅಮೆರಿಕಕ್ಕೆ ತೆರಳಿದ್ದರು. ಶಿವಣ್ಣ ಅಮೆರಿಕಕ್ಕೆ ತೆರಳುವಾಗ ಸಿನಿಮಾ ರಂಗದ ಹಲವು ಸೆಲೆಬ್ರಿಟಿಗಳ ಜೊತೆಗೆ ಹಲವಾರು ಮಂದಿ ಅಭಿಮಾನಿಗಳು ಮನೆಯ ಬಳಿ ಆಗಮಿಸಿ ಅವರನ್ನು ಬೀಳ್ಕೊಟ್ಟಿದ್ದರು. ಇಂದು (ಡಿಸೆಂಬರ್ 25) ಶಸ್ತ್ರಚಿಕಿತ್ಸೆ ನಡೆಯಲಿದೆ ಎಂಬುದನ್ನು ತಿಳಿದು ಬೆಂಗಳೂರು, ಮೈಸೂರು, ಚಾಮರಾಜನಗರ, ಬೆಳಗಾವಿ, ಬಳ್ಳಾರಿ ಸೇರಿದಂತೆ ಹಲವು ಕಡೆ ಶಿವಣ್ಣನ ಅಭಿಮಾನಿಗಳು ದೇವಾಲಯಗಳಲ್ಲಿ ವಿಶೇಷ ಪೂಜೆ, ಮೃತ್ಯುಂಜಯ ಹೋಮ, ಅನ್ನದಾನ ಇನ್ನಿತರೆ ಕಾರ್ಯಕ್ರಮಗಳನ್ನಹ ಹಮ್ಮಿಕೊಂಡಿದ್ದರು. ಸದ್ಯ ಶಿವರಾಜ್ ಕುಮಾರ್ ಆರೋಗ್ಯ ಸುಧಾರಿಸುತ್ತಿದ್ದು ಇನ್ನೂ ಕೆಲವು ದಿನಗಳ ಕಾಲ ಅಲ್ಲಿಯೇ ಚಿಕಿತ್ಸೆ ಮುಂದುವರೆಸಲಿದ್ದಾರೆ.