ನವದೆಹಲಿ: ಡಿಸಿಎಂ ಡಿ.ಕೆ. ಶಿವಕುಮಾರ್ʼಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ.ಹೌದು ಡಿ.ಕೆ. ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯವು 120B ಅಡಿ ದಾಖಲು ಮಾಡಿದ್ದ ಪ್ರಕರಣದ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಸರ್ವೋಚ್ಚ ನ್ಯಾಯಾಲಯ ರದ್ದುಗೊಳಿಸಿದೆ.
ಆದಾಯ ಮೂಲಕ್ಕಿಂತ 200 ಕೋಟಿ ಹೆಚ್ಚು ಅಕ್ರಮ ಸಂಪಾದನೆ ಮಾಡಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧದ ಸಿಬಿಐ ಕೇಸ್ ಅನ್ನು ಈಚೆಗೆ ರಾಜ್ಯ ಸರ್ಕಾರ ವಾಪಸ್ ಪಡೆದು ಲೋಕಾಯುಕ್ತಕ್ಕೆ ನೀಡುವ ತೀರ್ಮಾನವನ್ನು ತೆಗೆದುಕೊಂಡಿತ್ತು.
ಏನಿದು ಪ್ರಕರಣ?
ಆದಾಯಕ್ಕಿಂತಲೂ ಅಧಿಕ ಆಸ್ತಿ ಗಳಿಸಿದ ಆರೋಪ ಡಿ.ಕೆ. ಶಿವಕುಮಾರ್ ಮೇಲೆ ಇತ್ತು. ಈ ಪ್ರಕರಣವನ್ನು ಆಗಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಿ 2019ರಲ್ಲಿ ಸಿಬಿಐಗೆ ನೀಡಿತ್ತು. ಸಿಬಿಐಗೆ ಪ್ರಕರಣವನ್ನು ವಹಿಸಿದ್ದನ್ನು ಪ್ರಶ್ನೆ ಮಾಡಿದ್ದ ಡಿ.ಕೆ. ಶಿವಕುಮಾರ್ ಕೋರ್ಟ್ ಮೊರೆ ಹೋಗಿದ್ದರು. ಎಫ್ಐಆರ್ ಹಾಕದೇ ಕೇಂದ್ರೀಯ ತನಿಖಾ ತಂಡಕ್ಕೆ ನೀಡಿದ್ದು ಸರಿಯಲ್ಲ ಎಂದು ಕೋರ್ಟ್ನಲ್ಲಿ ಡಿಕೆಶಿ ಪ್ರಶ್ನೆ ಮಾಡಿದ್ದರು.
ಅಲ್ಲದೆ ಇದೇ ಪ್ರಕರಣದಲ್ಲಿ ಸುಮಾರು ಐದು ತಿಂಗಳುಗಳ ಕಾಲ ಡಿ.ಕೆ. ಶಿವಕುಮಾರ್ ಜೈಲು ಪಾಲಾಗಿದ್ದರು. ಬಳಿಕ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿತ್ತು. ಕೊನೆಗೆ ಕೋರ್ಟ್ನಿಂದ ಷರತ್ತುಬದ್ಧ ಜಾಮೀನು ಪಡೆಯಲಾಗಿತ್ತು. ಈ ನಡುವೆ ಹೈಕೋರ್ಟ್ನಲ್ಲಿ ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳಿ ಎಂದು ಸುಪ್ರೀಂ ಕೋರ್ಟ್ ಆದೇಶವನ್ನು ಹೊರಡಿಸಿತ್ತು. ಇಲ್ಲಿ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್ನ ಏಕ ಸದಸ್ಯ ಪೀಠ ಸಿಬಿಐ ವಿಚಾರಣೆಯನ್ನು ಎತ್ತಿ ಹಿಡಿದಿತ್ತು.
ಹೀಗಾಗಿ ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನೆ ಮಾಡಿದ ಡಿ.ಕೆ. ಶಿವಕುಮಾರ್ ದ್ವಿಸದಸ್ಯ ಪೀಠಕ್ಕೆ ಅಪೀಲು ಹೋಗಿದ್ದಾರೆ. ಈ ಅರ್ಜಿಯ ವಿಚಾರಣೆ ಇನ್ನೂ ನಡೆಯುತ್ತಿದೆ. ಆದರೆ, ಈ ಪ್ರಕರಣವನ್ನು ಸಂಪುಟದ ಮುಂದಿಟ್ಟು ವಾಪಸ್ ಪಡೆಯಲಾಗಿತ್ತು. ಈಗ ಸುಪ್ರೀಂ ಕೋರ್ಟ್ ಸಹ ಇಡಿ ಹೂಡಿದ್ದ ಇಡೀ ಪ್ರಕರಣವನ್ನೇ ರದ್ದುಗೊಳಿಸಿರುವುದರಿಂದ ಡಿ.ಕೆ. ಶಿವಕುಮಾರ್ಗೆ ಬಿಗ್ ರಿಲೀಫ್ ಸಿಕ್ಕಿದೆ.