ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂಬ ತಮ್ಮ ವಿವಾದಾತ್ಮಕ ಹೇಳಿಕೆಯನ್ನು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಸಮರ್ಥಿಸಿಕೊಂಡಿದ್ದಾರೆ. ಈ ವಿಚಾರವಾಗಿ ಕಾಂಗ್ರಸ್ ಟೀಕೆಗೆ ತಿರುಗೇಟು ನೀಡಿರುವ ಅವರು ನನ್ನ ಹೇಳಿಕೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿ ಎನ್ಐಎ ಅಧಿಕಾರಿಗಳು ಬಿಜೆಪಿ ಕಾರ್ಯಕರ್ತನನ್ನು ವಿಚಾರಣೆ ನಡೆಸಿರುವುದಕ್ಕೆ ಸಂಬಂಧಿಸಿ ದಿನೇಶ್ ಗುಂಡೂರಾವ್ ಅವರು ಬಿಜೆಪಿಯನ್ನು ಟೀಕಿಸಿದ್ದರು. ಇದಕ್ಕೆ ಸಂಬಂಧಿಸಿ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಯತ್ವಾಳ್ ಅವರು ಸಚಿವ ದಿನೇಶ್ ಗುಂಡೂರಾವ್ ಅವರ ಮನೆಯಲ್ಲೇ ಅರ್ಥ ಪಾಕಿಸ್ತಾನ ಇದೆ ಎಂದು ಟೀಕಿಸಿದ್ದರು.
ಈ ವಿಚಾರವಾಗಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದ ಕರ್ನಾಟಕ ಕಾಂಗ್ರೆಸ್, ಸಚಿವ ದಿನೇಶ್ ಗುಂಡೂರಾವ್ ಅವರ ಕುಟುಂಬದ ಕುರಿತು ಆಡಿದ ಬಸನಗೌಡ ಪಾಟೀಲ ಯತ್ನಾಳ್ ಅವರ ಮಾತುಗಳು ಅಕ್ಷಮ್ಯವಾದವು. ಘನತೆಯಿಂದಿದ್ದ ರಾಜಕೀಯವನ್ನು ಅತ್ಯಂತ ಕೀಳು ಅಭಿರುಚಿಗೆ ಇಳಿಸಿದ ಕೀರ್ತಿ ಕರ್ನಾಟಕ ಬಿಜೆಪಿ ನಾಯಕರಿಗೆ ಸಲ್ಲುತ್ತದೆ.
“ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ ಪಾಕಿಸ್ತಾನವಿದೆ” ಎಂಬ ಹೇಳಿಕೆ ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಕೂಡಲೇ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿತ್ತು. ಇದಕ್ಕೆ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯಿಸಿ, ನಿಮ್ಮ ನಾಯಕರ ಮನಸ್ಸಲ್ಲಿ, ಎಲ್ಲೆಡೆಯೂ ಪಾಕಿಸ್ತಾನದ ಪರ ಪ್ರೇಮ ಇರುವುದು ಹಲವಾರು ಬಾರಿ ಸಾಬೀತಾಗಿದೆ. ಪಾಕಿಸ್ತಾನದ ಪರ ಘೋಷಣೆ ಕೂಗಿದ ಅಯೋಗ್ಯರನ್ನು ಬೆಂಬಲಿಸಿದ ಪಕ್ಷ ನಿಮ್ಮದು. ನನ್ನ ಹೇಳಿಕೆಯಲ್ಲಿ ಯಾವುದೇ ಬದಲಾವಣೆಯಿಲ್ಲ’ ಎಂದಿದ್ದಾರೆ.