ಬೆಂಗಳೂರು: ಬಿಜೆಪಿ ಸರ್ಕಾರದ ಆಡಳಿತದಲ್ಲಿ ಸಿದ್ಧಪಡಿಸಲಾಗಿರುವ ಪಠ್ಯ ಪುಸ್ತಕದ (Text Book) ಪರಿಷ್ಕರಣೆ ವಿಚಾರವಾಗಿ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು. ವಿಧಾನಸೌಧದಲ್ಲಿ ಹಿರಿಯ ಐಎಎಸ್ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಪಠ್ಯ ಪುಸ್ತಕ ವಿಚಾರವಾಗಿ ಸಚಿವ ಸಂಪುಟ ಸಭೆಯಲ್ಲೇ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.
ಬಿಜೆಪಿ ಆಡಳಿತದ ಅವಧಿಯಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿದ್ದು ರಾಜ್ಯದಲ್ಲಿ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಆಡಳಿತದಲ್ಲಿ ಸುಧಾರಣೆ, ಪಾರದರ್ಶಕ ಆಡಳಿತ ನೀಡಲು ಅಧಿಕಾರಿಗಳ ಸಹಕಾರ ಕೋರಿದ್ದೇವೆ. ಉತ್ತಮ ಆಡಳಿತ ನೀಡಲು ತ್ವರಿತ ವಾಗಿ ಕಡತ ವಿಲೇವಾರಿ ಮಾಡಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ನಿಗದಿತ ಸಮಯ ಮಿತಿಯೊಳಗೆ ಕಡತಗಳನ್ನು ವಿಲೇವಾರಿ ಮಾಡುವಂತೆ ಸೂಚಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಜನರಿಗೆ ಸರ್ಕಾರಿ ಯೋಜನೆಗಳನ್ನು ತಲುಪಿಸಲು ಕ್ರಮವಹಿಸುವಂತೆ ಸೂಚನೆ ನೀಡಲಾಗಿದೆ. ಸರ್ಕಾರದ ಯೋಜನೆಗಳನ್ನು ನಿಗದಿತ ಕಾಲಾವಧಿಯೊಳಗೆ ಅನುಷ್ಠಾನಗೊಳಿಸಬೇಕು. ತಡವಾದರೆ ಭ್ರಷ್ಟಾಚಾರಕ್ಕೆ ಆಸ್ಪದವಾಗುತ್ತದೆ. ಜೊತೆಗೆ ಯೋಜನೆಯ ಅನುದಾನ ವೆಚ್ಚ ಹೆಚ್ಚಳವಾಗುತ್ತದೆ. ಹಾಗಾಗಿ ಸೂಕ್ತ ಸಮಯಕ್ಕೆ ಯೋಜನೆಯನ್ನು ಜನರಿಗೆ ತಲುಪಿಸಿ ಆಡಳತದಲ್ಲಿ ಪಾರದರ್ಶಕತೆ ತಂದು ಉತ್ತಮ ಆಡಳಿತ ನೀಡಲು ಕ್ರಮವಹಿಸಿ ಎಂದು ಸೂಚನೆ ನೀಡಿದ್ದೇನೆ ಎಂದು ಅವರು ತಿಳಿಸಿದರು.