ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿ ದಾಖಲಾಗಿದ್ದ ಎರಡು ಪ್ರಕರಣದಲ್ಲೂ ಎಂಎಲ್ಸಿ ಸೂರಜ್ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದ್ದು, ಒಂದು ತಿಂಗಳ ಜೈಲು ವಾಸದ ಬಳಿಕ ರಿಲೀಸ್ ಆಗಿದ್ದಾರೆ. ತನ್ನ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ, ಶೀಘ್ರ ಸತ್ಯ ಹೊರ ಬರಲಿದೆ. ಎಲ್ಲದಕ್ಕೂ ಎರಡು-ಮೂರು ದಿನಗಳಲ್ಲಿ ಉತ್ತರ ನೀಡುವುದಾಗಿ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.
ಮಂಗಳವಾರ ಅಪರಾಹ್ನ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಹೊರ ಬಂದಿದ್ದಾರೆ. ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಸೂರಜ್ ರೇವಣ್ಣ ವಿರುದ್ಧ 2 ಪ್ರತ್ಯೇಕ ಪ್ರಕರಣ ದಾಖಲಾಗಿದ್ದವು. ಹೊಳೆನರಸೀಪುರ ಟೌನ್ನಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಮೊದಲಿಗೆ ಸೂರಜ್ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಜಾಮೀನು ಮಂಜೂರು ಮಾಡಿತ್ತು. ಬಳಿಕ ಸೋಮವಾರ ಎರಡನೇ ಪ್ರಕರಣದಲ್ಲೂ ನಿರೀಕ್ಷಣಾ ಜಾಮೀನು ನೀಡಿತ್ತು.
ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನವಾಗಿರುವ ಸೂರಜ್ ರೇವಣ್ಣಗೆ ಜುಲೈ 3ರಂದು ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿತ್ತು. ಸಿಐಡಿ ಕಸ್ಟಡಿ ಮುಕ್ತಾಯಗೊಂಡ ನಂತರ 42ನೇ ಎಸಿಎಂಎಂ ಕೋರ್ಟ್ಗೆ ಹಾಜರುಪಡಿಸಿದಾಗ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಸೂಚಿಸಲಾಗಿತ್ತು. ಇದರಿಂದ ಸೂರಜ್ ರೇವಣ್ಣ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದರು. ಜೂನ್ 23ರಂದು ಬಂಧನವಾಗಿದ್ದ ಸೂರಜ್ ರೇವಣ್ಣ ಪರಪ್ಪನ ಅಗ್ರಹಾರ ಸೇರಿದ್ದರು. ಪ್ರಕರಣ ನಡೆದು 30 ದಿನಗಳ ನಂತರ ಈಗ ಸೂರಜ್ ಹೊರ ಬಂದಿದ್ದಾರೆ.
ಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿ ದೌರ್ಜನ್ಯ ಎಸಗಿದ್ದು, ನನ್ನ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಸೂರಜ್ ರೇವಣ್ಣ ವಿರುದ್ಧ ಅರಕಲಗೂಡಿನ ಜೆಡಿಎಸ್ ಕಾರ್ಯಕರ್ತರೊಬ್ಬರು ಆರೋಪ ಮಾಡಿದ್ದರು. ಈ ಬಗ್ಗೆ ಡಿಜಿಪಿ, ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಮುಖ್ಯಮಂತ್ರಿ ಹಾಗೂ ಗೃಹಮಂತ್ರಿಗಳಿಗೆ ದೂರು ಸಲ್ಲಿಸಿದ್ದರು. ಬಳಿಕ ಜೂನ್ 22ರಂದು ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಸೂರಜ್ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಾಗಿತ್ತು.
ದೌರ್ಜನ್ಯದ ಆರೋಪ
ಖಾಸಗಿ ಫೈನಾನ್ಸ್ ಕಂಪನಿಯಲ್ಲಿ ಉದ್ಯೋಗಿಯಾದ ಜೆಡಿಎಸ್ ಕಾರ್ಯಕರ್ತ, ಜೂನ್ 16ರಂದು ಸೂರಜ್ ತನಗೆ ವಾಟ್ಸ್ಆ್ಯಪ್ ಮೂಲಕ ಸಂದೇಶ ಕಳುಹಿಸಿ, ಗನ್ನಿಕಡ ತೋಟದ ಮನೆಗೆ ಆಹ್ವಾನಿಸಿದ್ದರು. ಉದ್ಯೋಗ ನೀಡುವ ಭರವಸೆ ನೀಡಿ ತನ್ನನ್ನು ಕರೆಸಿಕೊಂಡು, ಸಲಿಂಗಕಾಮಕ್ಕೆ ಒತ್ತಾಯಿಸಿ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದರು. ಇದರಿಂದ ನನ್ನ ದೇಹದ ಮೇಲೆ ಗಾಯಗಳಾಗಿದ್ದು, ಈ ಬಗ್ಗೆ ಎಲ್ಲಾದರೂ ಬಹಿರಂಗಪಡಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಕೂಡ ಹಾಕಿದ್ದಾರೆ ಎಂದು ಸಂತ್ರಸ್ತ ಆರೋಪಿಸಿದ್ದರು.