ಬೆಂಗಳೂರು: ಕೊಡಿಗೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಸಹಕಾರ ನಗರದಲ್ಲಿ ದುಷ್ಟನೊಬ್ಬ ರಸ್ತೆ ಮೇಲೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಮೇಲೆ ಕಲ್ಲು ಎತ್ತಿ ಹಾಕಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಹಿಳೆಯನ್ನು ನೋಡಿದ ಜನ ದುಷ್ಟನಿಗೆ ಧರ್ಮದೇಟು ಕೊಟ್ಟಿದ್ದಾರೆ.
ಆಂಧ್ರಪ್ರದೇಶದ ಕಡಪ ಮೂಲದ ಸುನಿತಾ (38) ಹಲ್ಲೆಗೊಳಗಾದ ಮಹಿಳೆ, ಗುರುವಾರ ಆ.8ರ ಸಂಜೆ ನಡೆದುಕೊಂಡು ಹೋಗುವಾಗ ವ್ಯಕ್ತಿಯು ಅವರ ತಲೆಯ ಮೇಲೆ ಕಲ್ಲು ಎತ್ತಿ ಹಾಕಿದ್ದಾನೆ. ಕಲ್ಲು ಎತ್ತಿ ಹಾಕಿದ್ದಲ್ಲದೆ, ಕಲ್ಲಿನಿಂದ ಅವರ ತಲೆಯನ್ನು ಜಜ್ಜಿದ್ದಾನೆ. ಇದರಿಂದಾಗಿ ಮಹಿಳೆಯು ರಕ್ತದ ಮಡುವಿನಲ್ಲಿ ಬಿದ್ದಿದ್ದರು.
ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯರು, ದುಷ್ಟನನ್ನು ಹಿಡಿದು ಧರ್ಮದೇಟು ಕೊಟ್ಟಿದ್ದಾರೆ. ಬಳಿಕ ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಕೊಡಿಗೇಹಳ್ಳಿ ಪೊಲೀಸರು ಆರೋಪಿಯ ವಿಚಾರಣೆ ಮಾಡುತ್ತಿದ್ದಾರೆ. ಏಕಾಏಕಿ ದಾಳಿ ಮಾಡಲು ಕಾರಣ ಏನು ಎಂಬುದು ಗೊತ್ತಾಗಿಲ್ಲ. ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.