ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸೈಟ್ ಹಗರಣ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಬೆನ್ನಲ್ಲೇ ರಾಜ್ಯಪಾಲರ ಮಧ್ಯಪ್ರವೇಶವಾಗಿದೆ.
ಮುಡಾ ಪ್ರಕರಣದ ಬಗ್ಗೆ ಪೂರ್ಣ ವಿವರಣೆ ನೀಡುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸೂಚಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಧರ್ಮಪತ್ನಿ ಪಾರ್ವತಿ ಅವರಿಗೆ ಅರ್ಹತೆಗೂ ಮೀರಿ ಎರಡು ಕೋಟಿ ರೂ. ಬೆಲೆಬಾಳುವ 14 ನಿವೇಶನಗಳನ್ನು ಪ್ರತಿಷ್ಠಿತ ವಿಜಯನಗರ ಬಡಾವಣೆಯಲ್ಲಿ ಹಂಚಿಕೆ ಮಾಡಲಾಗಿದೆ. ಅರ್ಹತೆ ಪ್ರಕಾರ ಪಾರ್ವತಿ ಅವರಿಗೆ ನೀಡಬೇಕಾಗಿದ್ದು ಕೇವಲ ಎರಡು ಜಮೀನು ಮಾತ್ರ. ಆದರೆ 14 ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಬಿಜೆಪಿ ಮತ್ತು ಜೆಡಿಎಸ್ ಗಂಭೀರ ಆರೋಪ ಮಾಡುತ್ತಿದೆ.
ಈ ಆರೋಪಕ್ಕೆ ಸಿದ್ದರಾಮಯ್ಯ, ನಿಯಮದ ಪ್ರಕಾರವೇ ಎಲ್ಲರಿಗೂ ಹಂಚಿಕೆಯಾಗುವಂತೆ ಮುಡಾದಿಂದ ಸೈಟ್ ಹಂಚಿಕೆಯಾಗಿದೆ. ನಾವು ಯಾವುದೇ ತಪ್ಪು ಮಾಡಿಲ್ಲ. ನಾವು ಅಲ್ಲೇ ಸೈಟ್ ನೀಡಬೇಕೆಂದು ಕೇಳಿಕೊಂಡಿಲ್ಲ. ಮುಡಾದವರು ಹಂಚಿಕೆ ಮಾಡಿದ್ದಾರೆ. ಯಾವುದೇ ಅಕ್ರಮ ನಡೆಸಿಲ್ಲ ಎಂದು ಸಮರ್ಥಿಸಿಕೊಳ್ಳುತ್ತಿದ್ದಾರೆ.