ಬೆಂಗಳೂರು;- ವಿದ್ಯುತ್ ಖರೀದಿಯಲ್ಲಿ ಅವ್ಯವಹಾರ ನಡೆದಿಲ್ಲ ಎಂದು ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
ವಿದ್ಯುತ್ ಖರೀದಿ ಮತ್ತು ಕಲ್ಲಿದ್ದಲು ಆಮದು ಪ್ರಕ್ರಿಯೆ ನಡೆಯುತ್ತಿದೆ. ಇದರಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ. ಈ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಾಡಿರುವ ಆರೋಪ ಸತ್ಯಕ್ಕೆ ದೂರವಾಗಿದ್ದು, ರಾಜ್ಯ ಸರ್ಕಾರ ತಳ್ಳಿ ಹಾಕುತ್ತದೆ ಎಂದರು.
ಈ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ವರ್ಷ ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಅದಕ್ಕೆ ಅನುಗುಣವಾಗಿ ಅಗತ್ಯ ವಿದ್ಯುತ್ ಪೂರೈಸಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಬಾರಿ ವಿದ್ಯುತ್ ಬೇಡಿಕೆ ಎಷ್ಟರ ಮಟ್ಟಿಗೆ ಏರಿಕೆಯಾಗಿದೆ ಎಂದರೆ, ಆಗಸ್ಟ್ ತಿಂಗಳ ವಿದ್ಯುತ್ ಬಳಕೆ ಬೇಸಿಗೆ ಕಾಲದಲ್ಲಿನ ಬಳಕೆಯನ್ನು ಮೀರಿಸಿದೆ. ಈ ಅಕ್ಟೋಬರ್ನಲ್ಲೇ 15,000 ಮೆ.ವ್ಯಾ.ಗಿಂತ ಹೆಚ್ಚಿನ ವಿದ್ಯುತ್ ಬೇಡಿಕೆ ಇದೆ. ಆ ಬೇಡಿಕೆಗೆ ಅನುಗುಣವಾಗಿ ವಿದ್ಯುತ್ ಒದಗಿಸುವುದು ನಮ್ಮ ಜವಾಬ್ದಾರಿ. ಅದಕ್ಕಾಗಿ ಪ್ರಯತ್ನ ಮಾಡಿದ್ದು, ಅದರಂತೆ ವಿದ್ಯುತ್ ಖರೀದಿ ಮತ್ತು ಕಲ್ಲಿದ್ದಲು ಆಮದು ಮಾಡಿಕೊಳ್ಳಲಾಗುತ್ತಿದೆ ಎಂದು ಸಚಿವರು ಹೇಳಿದರು.