ಮೂರು ಹೊಸ ಕ್ರಿಮಿನಲ್ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿವೆ. ದೇಶದ ವಸಾಹತುಶಾಹಿ ಯುಗದ ಶಾಸನಗಳನ್ನು ಬದಲಿಸುತ್ತವೆ ಎಂದು ಸರ್ಕಾರ ಪ್ರಕಟಿಸಿದೆ.
ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಮಸೂದೆಯು 1860 ರ ಭಾರತೀಯ ದಂಡ ಸಂಹಿತೆ (ಐಪಿಸಿ), 1973 ರ ಕ್ರಿಮಿನಲ್ ಪ್ರೊಸೀಜರ್ ಕೋಡ್ (CrPC) ಮತ್ತು 1872 ರ ಭಾರತೀಯ ಸಾಕ್ಷ್ಯ ಕಾಯಿದೆಯನ್ನು ಬದಲಿಸುತ್ತದೆ.
ಮೂರು ಕಾನೂನುಗಳನ್ನು ಸಂಸತ್ತು ಈಚೆಗೆ ಅಂಗೀಕರಿಸಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕಳೆದ ಡಿಸೆಂಬರ್ನಲ್ಲಿ ಅದಕ್ಕೆ ಅಂಕಿತ ಹಾಕಿದ್ದರು. ಹೊಸ ಕಾನೂನುಗಳು ಭಾರತೀಯತೆ, ಭಾರತೀಯ ಸಂವಿಧಾನ ಮತ್ತು ಜನರ ಯೋಗಕ್ಷೇಮಕ್ಕೆ ಒತ್ತು ನೀಡುತ್ತವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಳೆದ ವರ್ಷ ಸಂಸತ್ತಿನಲ್ಲಿ ಮಂಡಿಸುವಾಗ ಪ್ರತಿಪಾದಿಸಿದ್ದರು.
ಹೊಸ ಕಾನೂನುಗಳು ತಂತ್ರಜ್ಞಾನದ ಬಳಕೆಯನ್ನು ಪ್ರೋತ್ಸಾಹಿಸುತ್ತವೆ. ತನಿಖೆ, ಪ್ರಾಸಿಕ್ಯೂಷನ್ ಮತ್ತು ನ್ಯಾಯಾಂಗ ವ್ಯವಸ್ಥೆಯಲ್ಲಿ ನ್ಯಾಯವು ವಿಜ್ಞಾನಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತದೆ ಎಂದು ಅವರು ತಿಳಿಸಿದ್ದರು. ಮೂರು ಕಾನೂನುಗಳ ಅಡಿಯಲ್ಲಿ ಎಲ್ಲಾ ವ್ಯವಸ್ಥೆಗಳು ಜಾರಿಗೆ ಬಂದ ನಂತರ ಐದು ವರ್ಷಗಳಲ್ಲಿ ಭಾರತೀಯ ಕ್ರಿಮಿನಲ್ ನ್ಯಾಯ ವ್ಯವಸ್ಥೆಯು ವಿಶ್ವದಲ್ಲೇ ಅತ್ಯಂತ ಮುಂದುವರಿದ ಕಾನೂನಾಗಲಿದೆ ಎಂದು ಅಮಿತ್ ಶಾ ಪ್ರತಿಪಾದಿಸಿದ್ದರು.