ಲಾಡರ್ಹಿಲ್: ಯುವತಾರೆ ಯಶಸ್ವಿ ಜೈಸ್ವಾಲ್ (Yashasvi Jaiswal) ಹಾಗೂ ಶುಭಮನ್ ಗಿಲ್ (Shubman Gill) ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಟೀಂ ಇಂಡಿಯಾ, ವೆಸ್ಟ್ ಇಂಡೀಸ್ (West Indies) ವಿರುದ್ಧ ಟಿ20 ಸರಣಿಯ 4ನೇ ಪಂದ್ಯದಲ್ಲಿ 9 ವಿಕೆಟ್ಗಳ ಭರ್ಜರಿ ಜಯ ಸಾಧಿಸುವ ಮೂಲಕ 2-2 ಅಂತರದಲ್ಲಿ ಸಮಬಲ ಸಾಧಿಸಿದೆ. ಇಂದು (ಆ.13) ಲಾಡರ್ಹಿಲ್ನ ಸೆಂಟ್ರಲ್ ಬ್ರೋವರ್ಡ್ ರೀಜನಲ್ ಪಾರ್ಕ್ ಸ್ಟೇಡಿಯಂ ಟರ್ಫ್ ಕ್ರೀಡಾಂಗಣದಲ್ಲಿ ನಿರ್ಣಾಯಕ ಪಂದ್ಯ ನಡೆಯಲಿದ್ದು, ರಾತ್ರಿ 8ಕ್ಕೆ ಪಂದ್ಯ ಆರಂಭವಾಗಲಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡ 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 178 ರನ್ ಗಳಿಸಿತ್ತು. ಬೃಹತ್ ಮೊತ್ತದ ಗುರಿ ಬೆನ್ನತ್ತಿದ ಭಾರತ (Team India) 17 ಓವರ್ಗಳಲ್ಲೇ ಕೇವಲ 1 ವಿಕೆಟ್ ನಷ್ಟಕ್ಕೆ 179 ರನ್ ಗಳಿಸಿ ಭರ್ಜರಿ ಜಯ ಸಾಧಿಸಿತು. ಆರಂಭಿಕರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ ಹಾಗೂ ಶುಭಮನ್ ಗಿಲ್ ಆರಂಭದಿಂದಲೇ ವಿಂಡೀಸ್ ಬೌಲರ್ಗಳನ್ನ ಬೆಂಡೆತ್ತಲು ಶುರು ಮಾಡಿದರು. ಮೊದಲ ವಿಕೆಟ್ಗೆ ಈ ಜೋಡಿ 94 ಎಸೆತಗಳಲ್ಲಿ 165 ರನ್ ಕಲೆಹಾಕಿತ್ತು.
ಮೊದಲು ಬ್ಯಾಟಿಂಗ್ ಮಾಡಿದ ವಿಂಡೀಸ್ ಪರ ಶಿಮ್ರಾನ್ ಹೆಟ್ಮೇಯರ್ ಭರ್ಜರಿ ಅರ್ಧಶತಕ ಸಿಡಿಸುವ ಮೂಲಕ ತಂಡಕ್ಕೆ ಆಸರೆಯಾದರು. 156.41 ಸ್ಟ್ರೈಕ್ರೇಟ್ನಲ್ಲಿ ಬ್ಯಾಟ್ ಬೀಸಿದ ಹೆಟ್ಮೇಯರ್ 39 ಎಸೆತಗಳಲ್ಲಿ 61 ರನ್ (4 ಸಿಕ್ಸರ್, 3 ಬೌಂಡರಿ) ಗಳಿಸಿದರು. ಇದರೊಂದಿಗೆ ಶಾಯ್ ಹೋಪ್ 29 ಎಸೆತಗಳಲ್ಲಿ 45 ರನ್ (2 ಸಿಕ್ಸರ್, 3 ಬೌಂಡರಿಗಳ ಕೊಡುಗೆ ನೀಡಿದರು. ಅಂತಿಮವಾಗಿ ವಿಂಡೀಸ್ 178 ರನ್ ಗಳಿಸುವಲ್ಲಿ ಯಶಸ್ವಿಯಾಗಿತ್ತು. ಆದ್ರೆ ಕಳಪೆ ಬೌಲಿಂಗ್ನಿಂದಾಗಿ ಹೀನಾಯ ಸೋಲು ಅನುಭವಿಸಿತು.
ಟೀಂ ಇಂಡಿಯಾ ಪರ ಅರ್ಷ್ದೀಪ್ ಸಿಂಗ್ 4 ಓವರ್ಗಳಲ್ಲಿ 38 ರನ್ ನೀಡಿ 3 ವಿಕೆಟ್, ಕುಲ್ದೀಪ್ ಯಾದವ್ 2 ವಿಕೆಟ್ ಕಿತ್ತರೆ, ಅಕ್ಷರ್ ಪಟೇಲ್, ಯಜುವೇಂದ್ರ ಚಾಹಲ್, ಮುಕೇಶ್ ಕುಮಾರ್ ತಲಾ ಒಂದೊಂದು ವಿಕೆಟ್ ಪಡೆದು ಮಿಂಚಿದರು. ವಿಂಡೀಸ್ ಪರ ರೊಮಾರಿಯೋ ಶೆಫರ್ಡ್ ಒಂದೇ ಒಂದು ವಿಕೆಟ್ಗೆ ತೃಪ್ತಿಪಟ್ಟುಕೊಂಡರು.