ಲಖನೌ: ಇಡೀ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ಉತ್ತರ ಪ್ರದೇಶದ ಉಮೇಶ್ ಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಎನ್ಕೌಂಟರ್ ನಡೆದಿದ್ದು, ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಪೊಲೀಸರು ಗುಂಡು ಹಾರಿಸಿ ಕೊಂದಿದ್ದಾರೆ. ಕೇವಲ 8 ದಿನಗಳ ಅಂತರದಲ್ಲಿ ನಡೆದ 2ನೇ ಎನ್ಕೌಂಟರ್ ಇದಾಗಿದೆ.
2005ರಲ್ಲಿ ನಡೆದಿದ್ದ ಬಿಎಸ್ಪಿ ಶಾಸಕನ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿ ಉಮೇಶ್ ಪಾಲ್ ಹತ್ಯೆಯಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಎನ್ಕೌಂಟರ್ನಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ಸೋಮವಾರ ತಿಳಿಸಿದ್ದಾರೆ. ಉಸ್ಮಾನ್ ಎಂಬಾತನನ್ನು ಪೊಲೀಸರು ಎನ್ಕೌಂಟರ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.
2005ರಲ್ಲಿ ಬಹುಜನ ಸಮಾಜವಾದಿ ಪಕ್ಷದ ಶಾಸಕ ರಾಜು ಪಾಲ್ ಅವರ ಹತ್ಯೆಯಾಗಿತ್ತು. ಈ ಪ್ರಕರಣದ ಪ್ರಮುಖ ಸಾಕ್ಷಿ ಉಮೇಶ್ ಪಾಲ್ ಅವರನ್ನು 2023ರ ಫೆಬ್ರವರಿ 24 ರಂದು ಗುಂಡಿಕ್ಕಿ ಕೊಲೆ ಮಾಡಿದ್ದರು. ಪಾಲ್ ಹಾಗೂ ಅವರ ಇಬ್ಬರು ಗನ್ನರ್ಗಳನ್ನು ಪ್ರಯಾಗ್ರಾಜ್ನಲ್ಲಿ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಇದರಲ್ಲಿ ಭಾಗಿಯಾಗಿದ್ದ ಆರು ಆರೋಪಿಗಳಲ್ಲಿ ಒಬ್ಬನಾಗಿದ್ದ ಉಸ್ಮಾನ್ ಎಂಬಾತನನ್ನು ಪೊಲೀಸರು ಎನ್ಕೌಂಟರ್ ಮಾಡಿದ್ದಾರೆ.
ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಹಿಡಿಯಲಾದ ಪಾಲ್ ಹತ್ಯೆಯ ಆಘಾತಕಾರಿ ದೃಶ್ಯಗಳು ಎಲ್ಲೆಡೆ ಹರಿದಾಡಿದ್ದು, ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದ್ದವು. ಹಗಲಿನ ವೇಳೆಯೇ ನಡೆದ ಅಪರಾಧದ ಕುರಿತು ಪ್ರತಿಪಕ್ಷಗಳ ಟೀಕೆಗೆ ಗುರಿಯಾಗಿದ್ದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಅಪರಾಧದಲ್ಲಿ ಭಾಗಿಯಾಗಿರುವವರನ್ನು ಸರ್ಕಾರ ಹತ್ತಿಕ್ಕುತ್ತದೆ ಎಂದು ಹೇಳಿದ್ದರು.