ಬೆಂಗಳೂರು: “ಬೆಂಗಳೂರಿಗೆ ಹೊಸ ರೂಪ ನೀಡುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ಪ್ರಮುಖ ಯೋಜನೆಗಳನ್ನು ಘೋಷಿಸಿದ್ದಾರೆ. ಇದಕ್ಕೆ ಪೂರಕವಾಗಿ ಸಧ್ಯದಲ್ಲೇ ಪಾಲಿಕೆ ಬಜೆಟ್ ಮಂಡನೆಯಾಗಲಿದೆ” ಎಂದು ಸನ್ಮಾನ್ಯ ಬೆಂಗಳೂರು ಉಪ ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಶ್ರೀ ಡಿ.ಕೆ. ಶಿವಕುಮಾರ್ ರವರು ತಿಳಿಸಿದರು. ಬೆಂಗಳೂರು ವಿವಿಯ ಜ್ಞಾನಭಾರತಿ ಬಿಪೆಡ್ ಮೈದಾನದಲ್ಲಿ ಭಾನುವಾರ ನಡೆದ “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಹೇಳಿದ್ದಿಷ್ಟು;
“ಬೆಂಗಳೂರಿನ ಹೊಸ ಯೋಜನೆಗಳಿಗೆ ಸಂಪನ್ಮೂಲ ಕ್ರೋಡೀಕರಿಸಲು ನಮ್ಮದೇ ಆದ ಯೋಜನೆಗಳಿವೆ. ಬೆಂಗಳೂರಿನಲ್ಲಿ ಇನ್ನು ಮುಂದೆ ಮೆಟ್ರೋ ಹೋಗುವ ಮಾರ್ಗದಲ್ಲಿ ಫ್ಲೈಓವರ್ ನಿರ್ಮಾಣಕ್ಕೂ ತೀರ್ಮಾನ ಮಾಡಲಾಗಿದೆ. ಈ ಬಗ್ಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಯಶವಂತಪುರದಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಟನಲ್ ರಸ್ತೆ ಮಾಡಲು ಫೀಸಿಬಲ್ ವರದಿ ಸಿದ್ಧಪಡಿಸಲಾಗುತ್ತಿದೆ. ಸುಮ್ಮನಹಳ್ಳಿ, ಗೊರಗೊಂಟೆ ಪಾಳ್ಯ ಸೇರಿದಂತೆ ಇತರ ಕಡೆಗಳಲ್ಲಿ ಈ ಯೋಜನೆ ಮಾಡಲು ಸಿದ್ಧತೆ ಮಾಡುತ್ತಿದ್ದೇವೆ.