ಬೆಂಗಳೂರು: ಅತ್ಯಾಚಾರ ಮಾಡಿದವನನ್ನೇ ಮದುವೆಯಾಗುತ್ತೇನೆಂದು ಸಂತ್ರಸ್ತೆ ಹೇಳಿಕೆ ನೀಡಿದ ಹಿನ್ನೆಲೆ ಆರೋಪಿಗೆ ಬೆಂಗಳೂರಿನ ಹೈಕೋರ್ಟ್ (High Court) ಜಾಮೀನು ಮಂಜೂರು ಮಾಡಿದೆ. ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ದೋಷಿ ಎಂದು ತೀರ್ಮಾನಿಸಿ, ಜೀವಾವಧಿ ಶಿಕ್ಷೆ ವಿಧಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಅಪರಾಧಿ ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿ ಹೈಕೋರ್ಟ್ನಲ್ಲಿ ವಿಚಾರಣೆಗೆ ಬಾಕಿಯಿತ್ತು. ಈ ನಡುವೆ ಅರ್ಜಿಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದ ಆರೋಪಿ ಸಂತ್ರಸ್ತೆಯನ್ನು ಮದುವೆಯಾಗಲು ತಾನು ಸಿದ್ಧನಿದ್ದು, ಜೀವಾವಧಿ ಶಿಕ್ಷೆ ಅಮಾನತಿನಲ್ಲಿಟ್ಟು ಜಾಮೀನು ನೀಡುವಂತೆ ಮನವಿ ಮಾಡಿದ್ದ.
ಈ ಅರ್ಜಿಗೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ. ವೀರಪ್ಪ ಮತ್ತು ನ್ಯಾಯಮೂರ್ತಿ ಟಿ. ವೆಂಕಟೇಶ್ ನಾಯಕ್ ಅವರಿದ್ದ ಪೀಠ ವಿಚಾರಣೆ ನಡೆಸಿತ್ತು. ಈ ವಿಚಾರಣೆ ವೇಳೆ ಸಂತ್ರಸ್ತೆಯೂ ಹೈಕೋರ್ಟ್ಗೆ ಪ್ರಮಾಣಪತ್ರ ಸಲ್ಲಿಸಿ, ಅಪರಾಧಿಯನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುವಂತೆ ಕೋರಿದ್ದಳು. ಅರ್ಜಿದಾರ ತನ್ನ ಪ್ರಿಯಕರನೆಂದು ಸಂತ್ರಸ್ತೆಯೇ ಒಪ್ಪಿಕೊಂಡಿದ್ದಾಳೆ. ಸದ್ಯ ಆಕೆಗೆ 24 ವರ್ಷವಾಗಿದ್ದು, ಒಂದೊಮ್ಮೆ ಅರ್ಜಿದಾರನನ್ನು ವಿವಾಹವಾಗದಿದ್ದರೆ ತನ್ನ ಘನತೆ ಮತ್ತು ಗೌರವಕ್ಕೆ ಧಕ್ಕೆಯಾಗಲಿದೆ ಎಂದು ತಿಳಿಸಿದ್ದಾಳೆ. ಈ ಎಲ್ಲ ಅಂಶಗಳನ್ನು ಪರಿಗಣಿಸಿ, ಆಪರಾಧಿಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಅಮಾನತಿನಲ್ಲಿ ಇರಿಸಲಾಗುತ್ತಿದೆ ಎಂದು ಪೀಠ ತಿಳಿಸಿದೆ.