ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಜಾರಿಯಾದ(Enforcement of Election Code of Conduct) ನಂತರ ಒಟ್ಟು 323 ಕೋಟಿ ರೂ.ಮೌಲ್ಯದ ಸೊತ್ತು ವಶಕ್ಕೆ ಪಡೆಯಲಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ (Chief Electoral Officer Manoj Kumar Meena) ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ಕಚೇರಿಯಲ್ಲಿ ಮಾತನಾಡಿದ ಅವರು,115.96 ಕೋಟಿ ರೂ.ನಗದು, 22.36 ಕೋಟಿ ರೂ.ಮೌಲ್ಯದ ಉಚಿತ ಕೊಡುಗೆ, ಉಡುಗೊರೆ ವಸ್ತುಗಳು, 76.07 ಕೋಟಿ ರೂ.ಮೌಲ್ಯದ 20.29 ಲಕ್ಷ ಲೀಟರ್ ಮದ್ಯ, 21.37 ಕೋಟಿ ರೂ.ಮೌಲ್ಯದ 1,689 ಕೆಜಿ ಮಾದಕ ದ್ರವ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ. 82.77 ಕೋಟಿ ರೂ.ಮೌಲ್ಯದ 162.26 ಕೆಜಿ ಚಿನ್ನ, 4.54 ಕೋಟಿ ರೂ.ಮೌಲ್ಯದ 656.13 ಕೆಜಿ ಬೆಳ್ಳಿ ಸೇರಿದಂತೆ ಒಟ್ಟು 323.09 ಕೋಟಿ ರೂ.ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಚುನಾವಣಾಧಿಕಾರಿ ಮಾಹಿತಿ ನೀಡಿದ್ದಾರೆ.
ಚುನಾವಣಾ ಅಕ್ರಮಗಳಿಗೆ ಸಂಬಂಧಿಸಿದಂತೆ ವಿಚಕ್ಷಣ ದಳ, ಸ್ಥಿರ ಕಣ್ಗಾವಲು ತಂಡಗಳು, ಪೊಲೀಸ್ ಇಲಾಖೆಯು ಈವರೆಗೆ 2514 ಎಫ್ಐಆರ್ ಗಳನ್ನು ದಾಖಲಿಸಿದ್ದಾರೆ. 69,847 ಶಸ್ತ್ರಾಸ್ತ್ರಗಳನ್ನು ಜಮೆ ಮಾಡಿಸಿಕೊಳ್ಳಲಾಗಿದೆ. 18 ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. 20 ಶಸ್ತ್ರಾಸ್ತ್ರ ಪರವಾನಿಗೆ ರದ್ದುಪಡಿಸಲಾಗಿದೆ. ಸಿಆರ್ಪಿಸಿ ಕಾಯ್ದೆಯಡಿ 5,583 ಪ್ರಕರಣಗಳನ್ನು ದಾಖಲಿಸಲಾಗಿದೆ. ಅವುಗಳಲ್ಲಿ 10,297 ವ್ಯಕ್ತಿಗಳಿಂದ ಮುಚ್ಚಳಿಕೆ ಪತ್ರ ಪಡೆಯಲಾಗಿದೆ. 15,944 ಜಾಮೀನು ರಹಿತ ವಾರೆಂಟ್ಗಳನ್ನು ಜಾರಿಗೊಳಿಸಲಾಗಿದೆ ಎಂದು ಹೇಳಿದ್ದಾರೆ.