ಬೆಂಗಳೂರು: ಕೋರಮಂಗಲ ಪಿಜಿಯಲ್ಲಿ ಯುವತಿಯ ಹತ್ಯೆಯಾದ ಬೆನ್ನಲ್ಲೇ ಪಿಜಿಗಳಿಗೆ ಬಿಬಿಎಂಪಿ ಹೊಸ ಗೈಡ್ಲೈನ್ಸ್ ಬಿಡುಗಡೆ ಮಾಡಿದೆ.
ಬಿಬಿಎಂಪಿ- 2020ರ ಕಾಯ್ದೆಯಡಿ, ಪಾಲಿಕೆ ವ್ಯಾಪ್ತಿಯಲ್ಲಿ ಹೊಸದಾಗಿ ಪ್ರಾರಂಭಿಸಲು ಉದ್ದೇಶಿಸಿರುವ ಪೇಯಿಂಗ್ ಗೆಸ್ಟ್ಗಳಿಗೆ ಪರವಾನಿಗೆ ಮಂಜೂರಾತಿ, ನವೀಕರಣ ಹಾಗೂ ಈಗಾಗಲೇ ಪರವಾನಿಗೆ ಪಡೆದು ಅಸ್ತಿತ್ವದಲ್ಲಿರುವ ಪಿಜಿಗಳಿಗೆ ಸಂಬಂಧಿಸಿದಂತೆ ಜಾರಿಗೆ ತಂದಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಪಾಲಿಕೆ ತಿಳಿಸಿದೆ.
ಹೊಸ ನಿಯಮಗಳು
ಪೇಯಿಂಗ್ ಗೆಸ್ಟ್ಗಳಲ್ಲಿ ಎಲ್ಲಾ ಪ್ರವೇಶ/ನಿರ್ಗಮನ ದ್ವಾರ ಮತ್ತು ಆವರಣದ ಸುತ್ತಮುತ್ತಲಿನ ಘಟನಾವಳಿಗಳನ್ನು ಚಿತ್ರೀಕರಿಸಲು ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಿರತಕ್ಕದ್ದು. ಪ್ರತಿಯೊಂದು ಸಿ.ಸಿ ಟಿ.ವಿ. ಕ್ಯಾಮೆರಾದ ವೀಡಿಯೋ ಮತ್ತು ಫೂಟೇಜ್ಗಳನ್ನು 90 ದಿನಗಳವರೆಗೆ ಹಾರ್ಡ್ ವೇರ್ & ಸಾಫ್ಟ್ವೇರ್ ಬ್ಯಾಕಪ್ ಸ್ಟೋರೆಜ್ನ್ನು ಸಂರಕ್ಷಿಸತಕ್ಕದ್ದು. ವಸತಿ ಸಂಬಂಧಿತ ಕಟ್ಟಡ ನಿಯಮಗಳ ಪ್ರಕಾರ, ಪ್ರತಿಯೊಬ್ಬ ನಿವಾಸಿಗೆ ವಾಸಕ್ಕೆ ತಲಾ 70 ಚದರ ಅಡಿಗಳ ಕನಿಷ್ಠ ಜಾಗವಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಕಟ್ಟಡದಲ್ಲಿ ಒದಗಿಸಲಾದ/ಲಭ್ಯವಿರುವ ಸೌಕರ್ಯಕ್ಕನುಗುಣವಾಗಿ ನಿರ್ಧಿಷ್ಟ ಸಂಖ್ಯೆಯ ನಿವಾಸಿಗಳ ವಾಸಕ್ಕೆ ಮಾತ್ರ ಪರವಾನಗಿಯನ್ನು ನೀಡತಕ್ಕದ್ದು. ಪೇಯಿಂಗ್ ಗೆಸ್ಟ್ಗಳಲ್ಲಿ ವಾಸಿಸುವ ನಿವಾಸಿಗಳಿಗೆ ಸ್ವಚ್ಛ ಹಾಗೂ ನೈರ್ಮಲ್ಯತೆ ಹೊಂದಿರುವ ಸ್ನಾನಗೃಹಗಳು ಮತ್ತು ಶೌಚಾಲಯಗಳ ಸೇವೆಯನ್ನು ಒದಗಿಸುವಂತೆ ಬಿಬಿಎಂಪಿ ತಿಳಿಸಿದೆ.
ಕಡ್ಡಾಯವಾಗಿ ಶುದ್ಧ ಕುಡಿಯುವ ನೀರಿನ ಸೌಲಭ್ಯವಿರತಕ್ಕದ್ದು. ಪ್ರತಿಯೊಬ್ಬರಿಗೂ 135 ಎಲ್ಪಿಸಿಡಿ ನೀರಿನ ಲಭ್ಯತೆ ಇರುವುದನ್ನು ಮಾಲೀಕರು/ಉದ್ದಿಮೆದಾರರು ಖಚಿತಪಡಿಸಿಕೊಳ್ಳತಕ್ಕದ್ದು. ಉದ್ದಿಮೆದಾರರು ತಮ್ಮದೇ ಆದ ಅಡುಗೆಮನೆ ಹೊಂದಿದ್ದಲ್ಲಿ, ಪಾಲಿಕೆಯಿಂದ ಉದ್ದಿಮೆ ಪರವಾನಗಿ ನೀಡಿದ 03 ತಿಂಗಳ ಅವಧಿಯೊಳಗೆ ಕಡ್ಡಾಯವಾಗಿ ಎಫ್ಎಸ್ಎಸ್ಎಐ ಇಲಾಖೆಯಿಂದ ಲೈಸನ್ಸ್ ಪಡೆದುಕೊಳ್ಳತಕ್ಕದ್ದು. ಉದ್ದಿಮೆದಾರರು/ಮಾಲೀಕರು ಪಿಜಿಗಳಲ್ಲಿ ವಾಸಿಸುವ ನಿವಾಸಿಗಳ ಸುರಕ್ಷತಾ ದೃಷ್ಟಿಯಿಂದ ಕನಿಷ್ಟ ಪಕ್ಷ 01 ಸಿಬ್ಬಂದಿಯನ್ನಾದರೂ ಕಡ್ಡಾಯವಾಗಿ 24*7 ಸೇವೆಯಡಿಯಲ್ಲಿ ನಿಯೋಜಿಸುವಂತೆ ಪಾಲಿಕೆ ತಿಳಿಸಿದೆ.