ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Election Results 2023) ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಬಂದ ನಂತರ ವಿವಿಧ ಕಡೆಗಳಲ್ಲಿ ಬಿಜೆಪಿ (BJP) ಮುಖಂಡರು ಹಾಗೂ ಕಾರ್ಯಕರ್ತರ ಮೇಲೆ ಕಾಂಗ್ರೆಸ್ (Congress) ಕಾರ್ಯಕರ್ತರು ಹಲ್ಲೆ ನಡೆಸಿದ್ದು, ಇದನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಖಂಡಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿದ ಅವರು, ಕಾಂಗ್ರೆಸ್ನ ಹಿಂಸಾ ಸ್ಕೀಮ್ ನಾವು ಯಾವತ್ತೂ ಸಹಿಸುವುದಿಲ್ಲ ಎಂದಿದ್ದಾರೆ.
ಕಾಂಗ್ರೆಸ್ನ ಹಿಂಸಾ ಗ್ಯಾರಂಟಿ ಸ್ಕೀಮ್ ಸಹಿಸುವುದಿಲ್ಲ. ಹೊಸಕೋಟೆ ಸೇರಿದಂತೆ ರಾಜ್ಯದ ವಿವಿಧೆಡೆಗಳಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಹೊಸಕೋಟೆಯಲ್ಲಿ ಒಬ್ಬ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದು, ಇತರ ಇಬ್ಬರ ಮೇಲೆ ತೀವ್ರವಾಗಿ ಹಲ್ಲೆ ಮಾಡಲಾಗಿದೆ. ಕಾಂಗ್ರೆಸ್ ನಾಯಕರು ಇಂತಹ ಹಿಂಸಾಚಾರದ ಪ್ರವೃತ್ತಿಗೆ ಆಸ್ಪದ ಕೊಡಬಾರದು ಎಂದು ಹೇಳಿದ್ದಾರೆ.
ರಾಜ್ಯದ ವಿವಿಧ ಕಡೆಗಳಲ್ಲಿ ದೇಶದ್ರೋಹಿ ಚಟುವಟಿಕೆಗಳು ಹೆಚ್ಚಾಗಿವೆ. ಪಾಕಿಸ್ತಾನದ ಧ್ವಜ ಹಾರಿಸುವುದು ದೇಶದ್ರೋಹದ ಚಟುವಟಿಕೆಯಾಗಿದ್ದು ಇದನ್ನು ನಿಯಂತ್ರಿಸಬೇಕು. ಇಂತಹ ಹಿಂಸಾಚಾರದ ದೇಶದ್ರೋಹಿ ಚಟುವಟಿಕೆಗಳನ್ನು ಸಹಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಮುಖಂಡರು ತಮ್ಮೊಳಗಿನ ಭಿನ್ನಮತ ಬದಿಗಿಟ್ಟು ತಾವು ಈಗಾಗಲೇ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸಲು ಮುಂದಾಗಬೇಕು. ಹಿಂಸೆಯನ್ನು ಪ್ರಚೋದಿಸುವವರು ಮತ್ತು ದೇಶದ್ರೋಹಿ ಚಟುವಟಿಕೆಗಳಿಗೆ ಬೆಂಬಲ ನೀಡುವವರನ್ನು ಬಂಧಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಬೇಕು ಎಂದು ಹೇಳಿದರು.