ಬೆಂಗಳೂರು: ವನ್ಯಜೀವಿಗಳ ಚರ್ಮ, ಉಗುರು ಧರಿಸುವುದು ಕಾನೂನು ಉಲ್ಲಂಘನೆ. 1972ರ ವನ್ಯಜೀವಿಗಳ ಸಂರಕ್ಷಣಾ ಕಾಯ್ದೆಯಡಿ ಉಲ್ಲಂಘನೆ ಆಗುತ್ತದೆ. ಹುಲಿ ಉಗುರು ಧರಿಸಿದವರ ವಿರುದ್ಧ ಈವರೆಗೆ 8 ದೂರು ಬಂದಿದೆ ಎಂದು ವಿಕಾಸಸೌಧದಲ್ಲಿ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದ ತರುವಾಯ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಪೂರ್ವಜರು ಹೊಂದಿದ್ದ ವನ್ಯಜೀವಿ ಅಂಗಾಂಗದಿಂದ ಮಾಡಿದ ಟ್ರೋಫಿ, ಫಲಕ, ಪೆಂಡೆಂಟ್ ಸೇರಿದಂತೆ ಯಾವುದೇ ಉತ್ಪನ್ನಗಳನ್ನು ಅರಣ್ಯ ಇಲಾಖೆಯಿಂದ ದೃಢೀಕರಿಸಿಕೊಂಡು ಮಾಲೀಕತ್ವದ ಹಕ್ಕು ಪಡೆದುಕೊಳ್ಳಲು 2003 ರವರೆಗೆ ಹಲವು ಅವಕಾಶ ನೀಡಲಾಗಿತ್ತು. ಹಲವರು ತಮ್ಮ ಬಳಿ ಇದ್ದ ವನ್ಯಜೀವಿ ಉತ್ಪನ್ನಗಳಿಗೆ ಮಾಲೀಕತ್ವದ ಹಕ್ಕು ಪಡೆದಿದ್ದಾರೆ. ಇನ್ನೂ ಅನೇಕರು ದೃಢೀಕರಣ ಮತ್ತು ಪ್ರಮಾಣ ಪತ್ರ ಪಡೆದಿಲ್ಲ ಎಂದು ಹೇಳಿದರು.
ಗ್ರಾಮೀಣ ಪ್ರದೇಶದ ಕೆಲವರ ಮನೆಗಳಲ್ಲಿ ಜಿಂಕೆ ಚರ್ಮ, ಆನೆ ದಂತದಿಂದ ಮಾಡಿದ ಕಲಾಕೃತಿಗಳು, ಜಿಂಕೆ ಮತ್ತು ಸಾರಂಗದ ಕೊಂಬು ಇತ್ಯಾದಿಗಳನ್ನು ಇಟ್ಟುಕೊಂಡಿರುತ್ತಾರೆ. ಇದು ಅಪರಾಧ ಎಂಬುದೂ ಅವರಿಗೆ ತಿಳಿದಿಲ್ಲ. ವರ್ತೂರು ಸಂತೋಷ್ ಪ್ರಕರಣ ವರದಿಯಾದ ಬಳಿಕ, ವನ್ಯಜೀವಿ ಉತ್ಪನ್ನಗಳ ಅಕ್ರಮ ದಾಸ್ತಾನಿನ ಬಗ್ಗೆ ಹೆಚ್ಚಾಗಿ ದೂರುಗಳು ಬರುತ್ತಿವೆ. ಕಾನೂನಿನ ಅರಿವಿಲ್ಲದ ಶ್ರೀಸಾಮಾನ್ಯರಿಗೆ ಆಗುವ ತೊಂದರೆ ತಪ್ಪಿಸಲು ಒಂದು ಬಾರಿ ಕೊನೆಯದಾಗಿ ಇಂತಹ ಅಕ್ರಮ ಸಂಗ್ರಹಣೆ/ದಾಸ್ತಾನಿನ ಬಗ್ಗೆ ಘೋಷಣೆ ಮಾಡಿಕೊಳ್ಳಲು ಮತ್ತು ಸರ್ಕಾರಕ್ಕೆ ಮರಳಿಸಲು ಅವಕಾಶ ನೀಡುವ ಬಗ್ಗೆ ಪರಾಮರ್ಶಿಸಿ, ಇದಕ್ಕೆ ಇತಿಶ್ರೀ ಹಾಡಲು ನಿರ್ಧರಿಸಲಾಗಿದೆ ಎಂದು ವಿವರಿಸಿದರು.