ಬೆಂಗಳೂರು: ಕಲಬುರಗಿ, ಬೀದರ್, ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯ ಬದಲಾವಣೆ ಆಗಲಿದೆ. ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿ ಮೇರೆಗೆ ಸರ್ಕಾರದ ಆದೇಶ ಹೊರಬಿದ್ದಿದೆ.
ಈ ಭಾರಿ ಕರ್ನಾಟಕದಲ್ಲಿ ವಿಪರೀತ ಬಿಸಿಲು ಆರಂಭವಾಗಿದೆ. ಬಿಸಿಲಿನ ಪ್ರಭಾವ ಕಂಡು ಜನರು ಹೈರಾಣಾಗಿದ್ದಾರೆ. ಇದೀಗ ಬಿಸಿಲಿನ ತಾಪಮಾನದ ಕಾರಣಕ್ಕಾಗಿ ಕಿತ್ತೂರು ಕರ್ನಾಟಕದ ಎರಡು ಜಿಲ್ಲೆಗಳು, ಕಲ್ಯಾಣ ಕರ್ನಾಟಕದ 9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಕೆಲಸದ ಸಮಯ ಬದಲಾವಣೆ ಮಾಡಲಾಗಿದೆ.
ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳು ಹಾಗೂ ಕಿತ್ತೂರು ಕರ್ನಾಟಕದ 2 ಜಿಲ್ಲೆಗಳು ಸೇರಿದಂತೆ ಒಟ್ಟು 9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿಗಳ ಕೆಲಸದ ಅವಧಿಯನ್ನು ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಬೆಳಗ್ಗೆ 8ರಿಂದ ಮಧ್ಯಾಹ್ನ 1:30ರ ತನಕ ಸರ್ಕಾರಿ ಕಚೇರಿಗಳ ಕೆಲಸದ ಸಮಯ ನಿಗದಿ ಮಾಡಿದ್ದು, ಏಪ್ರಿಲ್, ಮೇ ತಿಂಗಳ ಅಂತ್ಯದ ತನಕವೂ ಸರ್ಕಾರಿ ಕಚೇರಿ ಸಮಯ ಬದಲಾವಣೆ ಜಾರಿಯಲ್ಲಿ ಇರಲಿದೆ.
8 ಜಿಲ್ಲೆಗಳಲ್ಲಿ ಸರ್ಕಾರಿ ನೌಕರರು ಬದಲಾದ ಸಮಯದಲ್ಲಿ ತಮ್ಮ ಕರ್ತವ್ಯವನ್ನು ಎಂದಿನಂತೆ ಯಾವುದೇ ಲೋಪ/ಅಡೆತಡೆಯಿಲ್ಲದೆ ಕರ್ತವ್ಯ ನಿರ್ವಹಿಸತಕ್ಕದ್ದು. ಸಾರ್ವಜನಿಕರಿಗೆ ಯಾವುದೇ ರೀತಿ ಅನಾನುಕೂಲ ಆಗದಂತೆ ಮತ್ತು ಜಿಲ್ಲಾಧಿಕಾರಿಗಳು/ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ತುರ್ತು ಸಂದರ್ಭದಲ್ಲಿ ಯಾವುದೇ ಕಾರ್ಯವನ್ನು ನಿರ್ವಹಿಸಲು ನಿರ್ದೇಶಿಸಿದಲ್ಲಿ ಕರ್ತವ್ಯ ನಿರ್ವಹಿಸತಕ್ಕದ್ದು ಎಂಬ ಷರತ್ತನ್ನು ಸಹ ಹಾಕಲಾಗಿದೆ.
